Thursday, September 19, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಕೋಮುಗಲಭೆಗೆ ಸಂಬಂಧಿಸಿದಂತೆ 46 ಜನರ ಬಂಧನ; ಭದ್ರತಾ ಪಡೆಗಳ ನಿಯೋಜನೆ

ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಎರಡು ಗುಂಪುಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ 46 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಘರ್ಷಣೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬುಧವಾರ ರಾತ್ರಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಆದಾಗ್ಯೂ, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದ್ದು, ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸೆಪ್ಟೆಂಬರ್ 14 ರವರೆಗೆ ಈ ಪ್ರದೇಶದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವುದನ್ನು ತಡೆಯುವ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಸೆ.12ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

“ಬುಧವಾರದ ಘಟನೆಗೆ ಸಂಬಂಧಿಸಿದಂತೆ ನಾವು 46 ಜನರನ್ನು ಬಂಧಿಸಿದ್ದೇವೆ. ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿದ್ದು, ಅಂಗಡಿಗಳು ತೆರೆದಿವೆ. ನಾವು ಸಿವಿಲ್ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜ್ಯ ಮೀಸಲು ಪೊಲೀಸರೊಂದಿಗೆ ಹೆಚ್ಚುವರಿ ಪಡೆಯನ್ನು ನಿಯೋಜಿಸಿದ್ದೇವೆ.” ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಪಿಟಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಅಕ್ರಮ ಸಭೆ, ಕೊಲೆ ಯತ್ನ, ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಆಸ್ತಿ ನಾಶ ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬುಧವಾರ ಬದರಿಕೊಪ್ಪಲು ಗ್ರಾಮದ ಜನರ ಗಣೇಶ ಮೂರ್ತಿ ಮೆರವಣಿಗೆ ಪೂಜಾ ಸ್ಥಳಕ್ಕೆ ತಲುಪಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ದುಷ್ಕರ್ಮಿಗಳು ಅಂಗಡಿಗಳನ್ನು ಧ್ವಂಸಗೊಳಿಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದೇ ವೇಳೆ ಮೆರವಣಿಗೆ ನಡೆಸಿದ ಯುವಕರ ಗುಂಪು ಹಿಂಸಾಚಾರಕ್ಕೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!