Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅ.28, 29ರಂದು ಸ್ಪರ್ಧಾತ್ಮಕ ಪರೀಕ್ಷೆ: ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್, ಜೀನ್ಸ್ ಪ್ಯಾಂಟ್, ಶೂ ಧರಿಸುವಂತಿಲ್ಲ !

ಮಂಡ್ಯ ಜಿಲ್ಲೆಯಲ್ಲಿ ಅಕ್ಟೋಬರ್ 28 ಮತ್ತು 29 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ, ಈ ಪರೀಕ್ಷೆಗೆ ಹಾಜರಾಗುವವರು ಎಂತಹ ಬಟ್ಟೆ ಧರಿಸಬೇಕು, ಎಂತಹ ಬಟ್ಟೆ ಧರಿಸಬಾರದು ಎಂದು ಪ್ರಾಧಿಕಾರವೇ ಮಾರ್ಗಸೂಚಿ ಹೊರಡಿಸಿದೆ.

ಜಿಲ್ಲೆಯಲ್ಲಿ ಈ ಪರೀಕ್ಷೆಗಳನ್ನು ನಡೆಸುವ ಸಂಬಂಧ ಅಪರ ಜಿಲ್ಲಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವ ಸಿದ್ದತಾ ಸಭೆ ಮಂಡ್ಯ ಜಿ.ಪಂ.ನ ಕಾವೇರಿ ಸಭಾಂಗಣದಲ್ಲಿ ನಡೆಯಿತು.

ಕೆಇಎ ಅರ್ಜಿ ಕರೆದಿದ್ದ ಹಿರಿಯ ಸಹಾಯಕರು, ಪ್ರಥಮ ದರ್ಜೆಸಹಾಯಕರು, ಸೇಲ್ಸ್ ಮೇಲ್ವಿಚಾರಕರು ಸೇರಿದಂತೆ ಮುಂತಾದ ಸಮನಾದ ಹುದ್ದೆಗಳಿಗೆ ಪರೀಕ್ಷೆ ನಡೆಯಲಿವೆ. ಅಕ್ಟೋಬರ್ 29 ರಂದು ದ್ವಿತೀಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರು‌ ಸೇರಿದಂತೆ ಸಮನಾದ ಹುದ್ದೆಗಳಿಗೆ ಪರೀಕ್ಷೆ ನಡೆಯಲಿವೆ.

nudikarnataka.com

ಮಂಡ್ಯ ಜಿಲ್ಲೆಯಲ್ಲಿ ಒಟ್ಟು 27 ಸೆಂಟರ್ ಗಳಲ್ಲಿ ಪರೀಕ್ಷೆ ನಡೆಯಲಿದ್ದು ಅದರಲ್ಲಿ ಅಕ್ಟೋಬರ್ 28ರಂದು 17 ಸೆಂಟರ್ ಗಳಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ. ಅಕ್ಟೋಬರ್ 29ರಂದು 27 ಸೆಂಟರ್ ಗಳಲ್ಲಿಯು ಪರೀಕ್ಷೆ ನಡೆಯಲಿದೆ. ಅಕ್ಟೋಬರ್ 28ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಪರೀಕ್ಷೆಗೆ 4,162 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಪರೀಕ್ಷೆಗೆ 4,199 ಅಭ್ಯರ್ಥಿಗಳು, ಅಕ್ಟೋಬರ್ 29ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಪರೀಕ್ಷೆಗೆ 10,643 ಅಭ್ಯರ್ಥಿಗಳು ಮತ್ತು ಮಧ್ಯಾಹ್ನ 2.30ಕ್ಕೆ ನಡೆಯಲಿರುವ ಪರೀಕ್ಷೆಗೆ 10,697 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಡಾ.ಹೆಚ್.ಎಲ್.ನಾಗರಾಜು ವಿವರಿಸಿದರು.

ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂಥ್, ಕ್ಯಾಲ್ಕುಲೇಟರ್, ಇರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೆಲಸಕ್ಕೆ ನಿಯೋಜಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು‌ ಮೊಬೈಲ್ ಉಪಯೋಗಿಸದಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ (ಆಡಳಿತ) ಎಂ ಬಾಬು, ಡಿ.ಡಿ.ಪಿ.ಯು ಚೆಲುವಯ್ಯ, ಡಯಟ್ ಪ್ರಾಂಶುಪಾಲರಾದ ಪುರುಷೋತ್ತಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು
  • ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರಸ್ ಕೋಡ್ ಆಗಿದೆ. ಕುರ್ತಾ, ಪೈಜಾಮನ್ನು ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  • ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳು ಇರಬಾರದು.
  • ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ
    ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
  • ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  • ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೊಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು , ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಥ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ಕೆ.ಇ.ಎ ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಹಿಜಾಬ್ ಧರಿಸುವ ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಜರಾಗಿ ತಪಾಸಣೆಗೆ ಒಳಗಾಗಬೇಕು. ಮಾಂಗಲ್ಯ ಸರ ಮತ್ತು ಮೂಗುತಿ‌ ಹೊರತು ಪಡಿಸಿ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ.
  • ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  • ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗೂ ತಿನ್ನುವುದನ್ನು ನಿಷೇಧಿಸಲಾಗಿದೆ.
  • ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  • ಬ್ಲೂಟೂತ್ ಸಾಧನೆಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸಿವುದನ್ನು, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರವನ್ನು, ಸಾಧನವನ್ನು ಧರಿಸುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾಸ್ಕ್ ಅನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನದಂದು ಪ್ರವೇಶ ಪತ್ರ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ತರುವುದು, ಎರಡು ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಫೋಟೋವನ್ನು ತರುವುದು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತರುವುದು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!