Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಭಾವಚಿತ್ರ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ದ ದೂರು

ಮಂಡ್ಯದ ಕುರುಬರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ಮಾಡಿ ಸಂತ ಕನಕದಾಸರವರ ಭಾವಚಿತ್ರವನ್ನು ವಿರೂಪಗೊಳಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ವತಿಯಿಂದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರು ಸಲ್ಲಿಸಲಾಯಿತು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿ ನಂತರ ಮಾತನಾಡಿದ ಅವರು ಸುಮಾರು 50 ವರ್ಷಗಳ ಹಿಂದೆ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ಸಾರ್ವಜನಿಕ ದೇಣಿಗೆಯ ಮೂಲಕ ವಿದ್ಯಾರ್ಥಿ ನಿಲಯ ಸ್ಥಾಪನೆ ಮಾಡಿದ್ದು, ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ನಿನ್ನೆ ನಡೆದ ಪಾದಯಾತ್ರೆ ಸಂದರ್ಭದಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿ ನಿಲಯದ ಕಟ್ಟಡದ ಕಿಟಕಿ ಗಾಜುಗಳನ್ನು ಕಲ್ಲು ಮತ್ತು ದೊಣ್ಣೆಗಳಿಂದ ಒಡೆದು ಧ್ವಂಸಗೊಳಿಸಿರುತ್ತಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಭಾವಚಿತ್ರವುಳ್ಳ ಬ್ಯಾನರನ್ನು ಹರಿದು, ಕ್ರೌರ್ಯವನ್ನು ಮೆರೆದು ಅಪಮಾನ ಮಾಡಿರುವವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮವನ್ನು ಜರುಗಿಸಬೇಕು ಹಾಗೂ ಪ್ರಚೋದನೆಯನ್ನು ನೀಡಿದವರನ್ನು ಪತ್ತೆಹಚ್ಚಿ, ಅಂತವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿರುವ ಎಲ್ಲಾ ಶೋಷಿತ ಸಮುದಾಯಗಳ ಸಂಘ ಸಂಸ್ಥೆಗಳು, ವಿದ್ಯಾರ್ಥಿ ನಿಲಯಗಳ ರಕ್ಷಣೆಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಚಾಲಕ ಮಾವಳ್ಳಿ ಶಂಕರ್, ಅನಂತ ನಾಯಕ್, ಮನನ್ ಸೇಠ್, ಹಿಂದುಳಿದ ಜಾತಿಗಳ ಒಕ್ಕೂಟದ ಮಂಡ್ಯ ಜಿಲ್ಲಾಧ್ಯಕ್ಷ ಕೆ.ಎಚ್. ನಾಗರಾಜ್, ಎಂಎಸ್ ರಾಜಣ್ಣ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂಎಲ್ ಸುರೇಶ್, ಸಾತನೂರು ಕೃಷ್ಣ, ರಾಜ್ಯ ಕುರುಬರ ಸಂಘದ ಖಜಾಂಚಿ ಕೃಷ್ಣಮೂರ್ತಿ, ಎಂ.ವಿ. ಸೋಮಶೇಖರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ