Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಸಚಿವ ಪಾಟೀಲ್

ಮಿಮ್ಸ್ (ಮಂಡ್ಯ ಜಿಲ್ಲಾಸ್ಪತ್ರೆ) ಆವರಣದಲ್ಲಿ ನಿರ್ಮಾಣವಾಗುತ್ತಿರುವ ಕ್ಯಾನ್ಸರ್ ಆಸ್ಪತ್ರೆ ಕಾಮಗಾರಿಗಳು 3 ತಿಂಗಳೊಳಗಾಗಿ ಪೂರ್ಣಗೊಳ್ಳಬೇಕೆಂದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಆರ್ ಪಾಟೀಲ್ ಸೂಚಿಸಿದರು.

ಮಿಮ್ಸ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ

ಎಂ.ಆರ್.ಐ ಹಾಗೂ ಸಿ.ಟಿ ಸ್ಕ್ಯಾನ್ ಆದ ನಂತರ ರೋಗಿಗಳ ವರದಿ ನೀಡಲು ಮೂರರಿಂದ ಐದು ದಿನ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಖಾಲಿ ಇರುವ ರೆಡಿಯಾಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿ ಟೆಲಿ ಸರ್ವಿಸ್ ಉಪಯೋಗಿಸಿಕೊಂಡು ಒಂದು ದಿನದೊಳಗಾಗಿ ವರದಿ ನೀಡುವ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊರ ಗುತ್ತಿಗೆ ಮೇಲೆ ಲ್ಯಾಬ್ ಸೇವೆ ಒದಗಿಸುತ್ತಿರುವ ಸಂಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೆಚ್ಚಿನ ದರ ವಿದಿಸುತ್ತಿದ್ದಾರೆ ಎಂದು ದೂರು ಕೇಳಿ ಬರುತ್ತಿದ್ದು, ಇದನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಟೆಂಡರ್ ರದ್ದುಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ಸಿಬ್ಬಂದಿಗಳ ಖಾತೆಗೆ ಸರಿಯಾಗಿ ಸಂಬಳ, ಪಿ‌ಎಫ್ ಜಮೆಯಾಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಿ. ಇದರ ಬಗ್ಗೆ ದೂರುಗಳು ಕೇಳಿಬಂದಲ್ಲಿ ಶಿಸ್ತು ಕ್ರಮ ವಹಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೆಲಸದ ಸಮಯದಲ್ಲಿ ಹೊರಗೆ ಕ್ಲಿನಿಕ್ ನಡೆಸುವಂತಿಲ್ಲ

ವೈದ್ಯರು ತಮ್ಮ ಕಾಲೇಜಿನ ಕೆಲಸ ನಿರ್ವಹಿಸಬೇಕಿರುವ ಸಮಯದಲ್ಲಿ ಹೊರಗೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ ಗಳಲ್ಲಿ ಕಾರ್ಯನಿರ್ವಹಿಸುವಂತಿಲ್ಲ, ಕಂಡುಬಂದರೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಇನ್ನು ಮುಂದೆ ಮಧ್ಯಾಹ್ನದ ವೇಳೆ ಸಹ ಈ ಹಾಜರಾತಿ ಸಂಗ್ರಹಿಸಲು ತಿಳಿಸಲಾಗುವುದು ಎಂದರು.

ವರ್ಚುಯಲ್ ಡಿಸೆಕ್ಸನ್ ಟೇಬಲ್ ಗೆ ಚಾಲನೆ

ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2.50 ಕೋಟಿ ರೂ ವೆಚ್ಚದಲ್ಲಿ ಖರೀದಿಸಲಾಗಿರುವ ಅನಾಟಮಿ ವರ್ಚುಯಲ್ ಡಿಸೆಕ್ಸನ್ ಟೇಬಲ್ (Anatomy virtual dissection table) ಗೆ ಸಚಿವರು ಚಾಲನೆ ನೀಡಿದರು.

ಹಾಸ್ಟೆಲ್ ಗೆ ಸ್ಥಳದ ವ್ಯವಸ್ಥೆ

ಶಾಸಕ ಪಿ.ರವಿಕುಮಾರ್ ಅವರು ಮಾತನಾಡಿ, ಬಿ.ಹೊಸೂರಿನಲ್ಲಿ ನರ್ಸಿಂಗ್, ಪ್ಯಾರ್ ಮೆಡಿಕಲ್ ಕಾಲೇಜು ಮತ್ತು ಹಾಸ್ಟೆಲ್ ಗೆ ಸ್ಥಳದ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕೆ ಯೋಜನೆ ರೂಪಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಸಭೆಯ ನಂತರ ಸಚಿವರು ಮಿಮ್ಸ್ ಆಸ್ಪತ್ರೆಯ ವಾಡ್೯ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಶಾಸಕ ಹಾಗೂ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಎ ಬಿ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಶಾಸಕರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!