Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಅಭಿನಂದನೆ: ಸಿ.ಎಸ್.ಪುಟ್ಟರಾಜು

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪ್ರಚಂಡ ಬಹುಮತದಿಂದ ಆಯ್ಕೆಯಾಗಿ ಕೇಂದ್ರ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿರುವ ಹೆಚ್‍.ಡಿ. ಕುಮಾರಸ್ವಾಮಿಯವರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತಾ ಸಮಾವೇಶ ಜೂನ್ 16 ರಂದು ಮಂಡ್ಯ ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮತದಾರರು ಕುಮಾರಸ್ವಾಮಿ ಅವರನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ.ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಮತ್ತು ಮತದಾರರಿಗೆ ಕುಮಾರಸ್ವಾಮಿಯವರು ಕೃತಜ್ಞತೆ ಸಲ್ಲಿಸಲಿದ್ದಾರೆ ಎಂದರು.

ಎನ್‌ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಜೊತೆಗೂಡಿ ಕೆಲಸ ಮಾಡಿದ್ದಾರೆ.ಈ ಹಿನ್ನಲೆಯಲ್ಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಿಂದಲೂ ಈ ಕೃತಜ್ಞತಾ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಕುಮಾರಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಬೇಕು. ಈ ಕಾರ್ಯಕ್ರಮದಲ್ಲಿ ಸುಮಾರು ಒಂದು ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿ

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಎಲ್ಲಾ ವಿಚಾರಗಳು ಕುಮಾರಸ್ವಾಮಿಯವರಿಗೆ ಗೊತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸೇರಿ ಮಂಡ್ಯ ಜಿಲ್ಲೆಯನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ನಮಗೆ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಳವಾಗಿದ್ದು, ಕೃಷಿ ಪ್ರಧಾನವಾದ ಜಿಲ್ಲೆಗೆ ಕೈಗಾರಿಕೆಗಳ ಸ್ಥಾಪನೆ ಅಗತ್ಯವಾಗಿದೆ. ಚುನಾವಣೆಗಳು ಮುಗಿದಿದ್ದು,ರಾಜಕಾರಣ ಬದಿಗಿಟ್ಟು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕೈಜೋಡಿಸಲಿ ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ, ಮುಖಂಡರಾದ ಬಿ.ಆರ್.ರಾಮಚಂದ್ರು, ಅಬ್ಬಾಸ್ ಅಲಿ ಬೋಹ್ರಾ, ಡಿ.ರಮೇಶ್, ಅಮರಾವತಿ ಚಂದ್ರಶೇಖರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!