ಕೆ ವಿವೇಕಾನಂದ ಅಭಿನಂದನಾ ಸಮಿತಿ ವತಿಯಿಂದ ಶಿಕ್ಷಕರಿಗೆ ಕೃತಜ್ಞತೆ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಕೆ ವಿವೇಕಾನಂದ ಅವರಿಗೆ ಅಭಿನಂದನಾ ಸಮಾರಂಭವನ್ನು ಜೂ.29ರಂದು ಮಧ್ಯಾಹ್ನ 2.30 ಗಂಟೆಗೆ ಮಂಡ್ಯ ನಗರದ ಡಾ.ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ ಬೋರೇಗೌಡ ತಿಳಿಸಿದರು.
ಮಂಡ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಅಂದು ನಡೆಯುವ ಕಾರ್ಯಕ್ರಮದಲ್ಲಿ ಕೆ.ವಿವೇಕಾನಂದ ಅವರು ತಮಗೆ ಅಭೂತಪೂರ್ವ ಗೆಲುವು ತಂದುಕೊಟ್ಟ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ನಂತರ ಅಭಿನಂಧನಾ ಸಮಿತಿ ವತಿಯಿಂದ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮನ್ಮುಲ್ ನಿರ್ದೇಶಕ ಬಿ ಆರ್ ರಾಮಚಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜನತಾ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಕೆ ಎಸ್ ವಿಜಯಾನಂದ ಉದ್ಘಾಟಿಸುವರು ಎಂದರು.
ಇದೇ ಸಂದರ್ಭದಲ್ಲಿ ಜಾನಪದ ವಿದ್ವಾಂಸ ವನಂ ಶಿವರಾಮು ಅವರು, ವಿಧಾನ ಪರಿಷತ್ ನೂತನ ಸದಸ್ಯ ಕೆ ವಿವೇಕಾನಂದ ಅವರನ್ನು ಅಭಿನಂದಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಜೆ ಎಸ್ ಎಸ್ ವಿದ್ಯಾಪೀಠದ ನಿರ್ದೇಶಕ ಬಿ ನಿರಂಜನಮೂರ್ತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್ ಕೆ ರಾಮು, ಮಾಂಡವ್ಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಸರ್ಕಾರಿ ನೌಕರ ಸಂಘದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್ ಶಂಭುಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚೆಲುವಯ್ಯ , ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್ ಭಾಗವಹಿಸಲಿದ್ದಾರೆ ಎಂದರು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹಣ ಹಂಚಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮತದಾರರು ಹಣ ಪಡೆದಿಲ್ಲ ಎಂದು ನಾನು ಹೇಳುವುದಿಲ್ಲ. ಮರಿತಿಬ್ಬೇಗೌಡರು 24 ವರ್ಷದಿಂದ ಪರಿಷತ್ ಸದಸ್ಯರಾಗಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಿಲ್ಲ. ಅಲ್ಲದೇ ಶಿಕ್ಷಕ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದರು. ಹಾಗಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಆಶಾಭಾವನೆಯಿದೆ ಎಂದರು.
ಗೋಷ್ಠಿಯಲ್ಲಿ ಜಿ ವಿ ರಮೇಶ್, ನಾಗೇಂದ್ರ ರಾವ್, ರಮೇಶ್ , ಶ್ರೀಕಾಂತ್, ಕೆ.ಆರ್.ರಾಜು ಉಪಸ್ಥಿತರಿದ್ದರು.




