ಕೃಷಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮಂಡ್ಯ ನಗರದಲ್ಲಿ ಜೂ.3ರಂದು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಗಡಿಭಾಗ ಮದ್ದೂರು ತಾಲೂಕು ನಿಡಘಟ್ಟ ಅಂಡರ್‌ಪಾಸ್ ಬಳಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಬೆಳಗ್ಗೆ 10.30ಕ್ಕೆ ಜಿಲ್ಲೆಗೆ ಬರಮಾಡಿಕೊಳ್ಳಲಾಗುವುದು. ಈ ಸಂದರ್ಭದಲ್ಲಿ ಮದ್ದೂರು ತಾಲೂಕಿನ ಸಾವಿರಾರು ಕಾರ‍್ಯಕರ್ತರು ಸಿಆರ್‌ಎಸ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದರು.
ನಂತರ ಮದ್ದೂರು, ಗೆಜ್ಜಲಗೆರೆ, ಬೂದನೂರು ಮಾರ್ಗವಾಗಿ ಮಂಡ್ಯ ನಗರಕ್ಕೆ ಸಚಿವರು ಆಗಮಿಸಲಿದ್ದಾರೆ. ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಮಧ್ಯಾಹ್ನ 12ಕ್ಕೆ ಆಯೋಜಿಸಿರುವ ಅಭಿನಂದನಾ ಸಮಾರಂಭ ಮತ್ತು ಜಿಲ್ಲೆಯ ಮತದಾರರಿಗೆ ಕೃತಜ್ಞತಾ ಸಮಾವೇಶದಲ್ಲಿ ಅವರು ಭಾಗವಹಿಸುವರು. ಈ ಸಂದರ್ಭದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಅವರೊಂದಿಗೆ ಜಿಲ್ಲೆಯ ಕಾಂಗ್ರೆಸ್‌ನ ಎಲ್ಲ ಶಾಸಕರನ್ನು ಅಭಿನಂದಿಸಲಾಗುವುದು ಎಂದರು.
ಸಮಾವೇಶದಲ್ಲಿ ಐದು ಸಾವಿರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ‍್ಯಕರ್ತರು, ಮುಖಂಡರು ಭಾಗವಹಿಸುವರು. ಈ ಸಂದರ್ಭದಲ್ಲಿ ಎಲ್ಲರಿಗೂ ಲಘು ಉಪಹಾರದ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಯುವ ಘಟಕದ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ನಗರಸಭೆ ಸದಸ್ಯರಾದ ಎಂ.ಎನ್.ಶ್ರೀಧರ್, ನಯೀಂ, ಮುಖಂಡರಾದ ಸುಂಡಹಳ್ಳಿ ಮಂಜುನಾಥ್, ಮುಜಾಯಿದ್, ಸಾತನೂರು ಕೃಷ್ಣ ಹಾಜರಿದ್ದರು.