ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ವಿಭಾಗದ ವತಿಯಿಂದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಣಿ ಸಭೆ ಹಾಗೂ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕ ರತ್ನ ಪ್ರಶಸ್ತಿ, ಕಾರ್ಮಿಕ ಕಾರ್ಡ್ ವಿತರಣೆ ಹಾಗೂ ನೋಂದಣಿ ಕಾರ್ಯಕ್ರಮವನ್ನು ಮೇ.31ರ ಬೆಳಿಗ್ಗೆ 11ಗಂಟೆಗೆ ಮಂಡ್ಯ ನಗರದ ರೈತ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಕೆ.ಎಂ.ರಾಮಕೃಷ್ಣ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾರ್ಮಿಕರು ಭಾಗವಹಿಸಲಿದ್ದು, ಅಂದು 1500ರಿಂದ 2000 ಕಾರ್ಮಿಕರ ನೋಂದಣಿ ಮಾಡಲಾಗುವುದು ಎಂದರು.
ಶಾಸಕ ರವಿಕುಮಾರ್ ಗೌಡ ಅಧ್ಯಕ್ಷತೆಯ ಕಾರ್ಯಕ್ರಮವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿರಲಿದ್ದು, ಈ ಹಿಂದೆ ನೋಂದಣಿ ಮಾಡಿಸಿದ್ದ 400 ಮಂದಿ ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್ ವಿತರಣೆ ಮೂಡಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹೆಚ್.ಆರ್.ನವೀನ್‌ಕುಮಾರ್, ನಗರ ಅಧ್ಯಕ್ಷ ಶಿವರುದ್ರ ಕೆ, ಹೆಚ್.ಆರ್.ಉದಯ್‌ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೃಷ್ಣ, ನವೀನ್, ಯೋಗೇಶ್, ರಾಘವೇಂದ್ರ, ಯೋಗೇಶ್ ಇತರರಿದ್ದರು.




