Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಗ್ಯಾರಂಟಿ ನಿಲ್ಲುವುದಿಲ್ಲ, ಅಪಪ್ರಚಾರಕ್ಕೆ ಕಿವಿಗೊಡಬೇಡಿ: ನರೇಂದ್ರಸ್ವಾಮಿ

ಲೋಕಸಭಾ ಚುನಾವಣೆ ಮುಗಿದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ವಿರೋಧ ಪಕ್ಷಗಳ ನಾಯಕರು ಅಪಪ್ರಚಾರ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.18 ರಂದು ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು ಪರಿಶೀಲನೆ ನಡೆಸಿದ ಬಳಿಕ ತಾಲ್ಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಲೋಕಸಭಾ ಚುನಾವಣೆ ಮುಗಿದ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಲಾಗುತ್ತಿದೆ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣದಿಂದಲೂ ನಿಲ್ಲಿಸುವ ಪ್ರಶ್ನೆಯೇ ಇಲ್ಲ, ರಾಷ್ಟ್ರನಾಯಕ ರಾಹುಲ್‌ಗಾಂಧಿ ಗ್ಯಾರಂಟಿ ಯೋಜನೆಗಳ ಪಿತಾಮಹರಾಗಿದ್ದು, ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಶೇ.2 ರಿಂದ 3 ರಷ್ಟು ಜನರು ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಸೌಲಭ್ಯದಿಂದ ವಂಚಿತರಾಗಿರಬಹುದು‌. ಆದರೇ ಶೇ.97ರಷ್ಟು ಮಂದಿ ಸೌಲಭ್ಯವನ್ನು ಪಡೆದು ಕೊಂಡಿದ್ದಾರೆಂದು ತಿಳಿಸಿದರು.

ಕಳೆದ 5 ವರ್ಷಗಳಿಂದ ಕಿರುಗಾವಲು ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆ, ಪೂರಿಗಾಲಿ ಹನಿ ನೀರಾವರಿ ಯೋಜನೆ, ಪಟ್ಟಣದ 24×7 ಶಾಶ್ವತ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಕಾಮಗಾರಿಗಳು ನೆನೆಗುದಿಗೆ ಬಿದಿದ್ದವು, ನನಗೆ ಅಧಿಕಾರ ಸಿಕ್ಕ ಕೂಡಲೇ ಕಾಮಗಾರಿಗಳಿಗೆ ಚುರುಕುಗೊಳಿಸಿದ್ದೇನೆ, ಪಟ್ಟಣದ 24×7 ಯೋಜನೆ ಕಾಮಗಾರಿ ಮುಗಿದಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ, ಪೂರಿಗಾಲಿ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಈಗಾಗಲೇ ಹಲವು ಬಾರಿ ರೈತರ ಸಭೆ ನಡೆಸಿದ್ದು, ತಕ್ಷಣದಲ್ಲಿಯೇ ರೈತರ ವಿಶ್ವಾಸದೊಂದಿಗೆ ಯೋಜನೆಯನ್ನು ಆರಂಭಿಸುವ ಚಿಂತನೆಯನ್ನು ಹೊಂದಿದ್ದೇನೆಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ವಿವಿಧ ಇಲಾಖೆಗಳ ಸೌಲಭ್ಯದ ಬಗ್ಗೆ ಸಮಗ್ರ ಮಾಹಿತಿ ಸಿಗುವಂತೆ ಮಳಿಗೆಗಳನ್ನು ಸ್ಥಾಪಿಸಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಜಿಲ್ಲಾಡಳಿತ ಎಲ್ಲಾ ಜವಾಬ್ದಾರಿಯನ್ನು ವಹಿಸಿಕೊಂಡು ಸಂಬಂಧಪಟ್ಟ ಇಲಾಖೆಗಳ ಸಹಯೋಗದಲ್ಲಿ ಮಳಿಗೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ರಾಜ್ಯ ಬಜೆಟ್ ನಲ್ಲಿ ಮಳವಳ್ಳಿ ತಾಲ್ಲೂಕಿನ ಯುವಜನತೆಗೆ ಉದ್ಯೋಗ ನೀಡುವಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯನವರು ಘೋಷಣೆ ಮಾಡುವ ಭರವಸೆ ಇದೆ.ತಾಲ್ಲೂಕಿನ ಯುವಜನತೆಗೆ ಉದ್ಯೋಗ ನೀಡುವುದು ನನ್ನ ಸಂಕಲ್ಪ ಎಂದರು.

ಗ್ಯಾರಂಟಿ ಯೋಜನೆ ಬಡವರ ಕಷ್ಟಕ್ಕೆ ನೆರವಾಗಿದೆ ಎಂಬುವುದನ್ನು ಸಾಬೀತು ಪಡಿಸಲು ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಫಲಾನುಭವಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಇದೇ ಸಂದರ್ಭದಲ್ಲಿ ವಾರ್ತಾಧಿಕಾರಿ ನಿರ್ಮಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತಹಶೀಲ್ದಾರ್ ಲೊಕೇಶ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ