ಸಂಸದೆ ಸುಮಲತಾ ಅಂಬರೀಶ್ ಅವರ ಜೊತೆ ಕಾಂಗ್ರೆಸ್ ಕಾರ್ಯಕರ್ತರು ಗುರುತಿಸಿಕೊಂಡು ಸಭೆ, ಸಮಾರಂಭಗಳಲ್ಲಿ ಭಾಗಿಯಾದರೆ, ಅಂತಹವರ ವಿರುದ್ಧ ಪಕ್ಷವು ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಡ್ಯದ ಕರ್ನಾಟಕದ ಸಂಘದಲ್ಲಿ ಸುಮಲತಾ ಅವರ ಬೆಂಬಲಿಗರು ನಡೆಸಿದ ಸಭೆಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಆಹ್ವಾನಿಸಿರುವುದು ಸರಿಯಾದ ಕ್ರಮವಲ್ಲ, ಏಕೆಂದರೆ 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೈತ್ರಿ ಅಭ್ಯರ್ಥಿ ಪರ ನಿಂತಿದ್ದರೂ ಸ್ಥಳೀಯ ರಾಜಕೀಯ ಕಾರಣಗಳಿಗಾಗಿ ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ನಮ್ಮ ಪಕ್ಷದ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಯಾಗಿದ್ದ ಸುಮಲತಾ ಅವರನ್ನು ಬೆಂಬಲಿಸಿದ್ದರು. ಆದರೆ ಆನಂತರದ ಬೆಳವಣಿಗೆಯಲ್ಲಿ ಸಂಸದೆ ಸುಮಲತಾ ಅವರು ಬಿಜೆಪಿ ಪರವಾದ ಹಲವು ಕಾಯ್ದೆಗಳನ್ನು ಬೆಂಬಲಿಸಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿ ಎಂದಿಗೂ ಸುಮಲತಾ ಅವರನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
2019ರ ಸಾರ್ವತ್ರಿಕ ಲೋಕಸಭಾ ಚುನಾವಣೆ ನಂತರ ನಡೆದ ನಗರಸಭಾ ಚುನಾವಣೆಗಳಲ್ಲಿ, ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ, ಸಹಕಾರಿ ಸಂಸ್ಥೆಗಳ ಚುನಾವಣೆಗಳಲ್ಲಿ, ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಸುಮಲತಾ ಅವರು ತಟಸ್ಥ ನೀತಿಯನ್ನು ಅನುಸರಿಸಿಕೊಂಡು ಬಂದಿದ್ದಾರೆ. ಅಲ್ಲದೇ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಯಿಂದ ವಿಮುಖರಾದಗಲೂ ಕೂಡ ಸುಮಲತಾ ಅವರು ತಟಸ್ಥ ನೀತಿ ಅನುಸರಿಸಿಕೊಂಡು ಬಂದಿದ್ದಾರೆ. ಈ ಎಲ್ಲಾ ಕಾರಣಗಳಿಗಾಗಿ ಕಾಂಗ್ರೆಸ್ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರ ಜೊತೆ ಗುರುತಿಸಿಕೊಳ್ಳಬಾರದು, ಒಂದು ವೇಳೆ ಗುರುತಿಸಿಕೊಂಡರೆ ಅಂತಹವರ ವಿರುದ್ಧ ಪಕ್ಷವು ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.
ಗೋಷ್ಠಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್, ಮುಖಂಡರಾದ ರುದ್ರಪ್ಪ, ಅಪ್ಪಾಜಿಗೌಡ. ವಿಜಯಲಕ್ಷ್ಮಿ ರಘುನಂದನ್ ಮತ್ತಿತರರು ಉಪಸ್ಥಿತರಿದ್ದರು.




