ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ಬೆಸಗರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ವೈದ್ಯರ ತಂಡಕ್ಕೆ ಶುಭಾಶಯ ಕೋರಿ ಅವರು ಮಾತನಾಡಿದರು.
ಬಿಜೆಪಿ ಸರ್ಕಾರ ಕೋವಿಡ್ ನೆಪವೊಡ್ಡಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಪರಿಣಾಮ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿವೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ರಾಜ್ಯದ ಜನತೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಚಿಂತನೆಯಲ್ಲಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಕನಿಷ್ಠ 120 ರಿಂದ 140 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಕಾಂಗ್ರೆಸ್ ನಡೆಸಿದ ಆಂತರಿಕ ಸಮೀಕ್ಷೆಯಿಂದ ವ್ಯಕ್ತವಾಗಿದೆ. ಯಾವುದೇ ಪಕ್ಷದ ಹಂಗಿಲ್ಲದೆ ಸ್ವತಂತ್ರವಾಗಿಯೇ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಅಧಿಕಾರ ಬಳಸಿಕೊಂಡು ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ವಿಧಾನಸಭಾ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಕಟ್ಟಿಹಾಕುವ ಕುತಂತ್ರ ನಡೆಸುತ್ತಿದೆ. ಇಂತಹ ತಂತ್ರ ಯಶಸ್ವಿಯಾಗುವುದಿಲ್ಲ. ಇದಕ್ಕೆ ಬಿಜೆಪಿ ಪಕ್ಷ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಕಿಡಿಕಾರಿದರು.
ಮದ್ದೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಭ್ಯರ್ಥಿಯನ್ನಾಗಿ ಈಗಾಗಲೇ ಘೋಷಣೆ ಮಾಡಿರುವುದರಿಂದ ಈ ಬಗ್ಗೆ ಮದ್ದೂರು ಕ್ಷೇತ್ರದ ಅಭ್ಯರ್ಥಿ ಬಗ್ಗೆ ಯಾವುದೇ ಗೊಂದಲವಿಲ್ಲ.ಹಾಗಾಗಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ಶ್ರಮಿಸುವ ಮೂಲಕ ಎಸ್.ಗುರುಚರಣ್ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.
ಇದೇ ವೇಳೆ ಬೆಸಗರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಸೇವೆ ಮತ್ತು ವೈದ್ಯಾಧಿಕಾರಿಗಳ ಕೊರತೆ ಇದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಬಳಿ ಸಮಸ್ಯೆಗಳನ್ನು ಬಿಚ್ಚಿಟ್ಟರು.
ತಕ್ಷಣವೇ ಸ್ಪಂದಿಸಿದ ಅವರು ಇನ್ನೊಂದು ತಿಂಗಳಲ್ಲಿ ಆರೋಗ್ಯ ಕೇಂದ್ರಕ್ಕೆ ನನ್ನ ಅನುದಾನದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುವುದು ಹಾಗೂ ವೈದ್ಯಾಧಿಕಾರಿಗಳ ಸೇವೆಯನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಆದಷ್ಟು ಬೇಗ ವೈದ್ಯರ ಕೊರತೆಯನ್ನು ನೀಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಗ್ರಾ.ಪಂ.ಅಧ್ಯಕ್ಷೆ ಸೌಮ್ಯ ಸತೀಶ್,ಉಪಾಧ್ಯಕ್ಷೆ ಗಿರಿಜಾ ಕೃಷ್ಣ ಗೌಡ,ಸದಸ್ಯರಾದ ಪ್ರಸನ್ನ, ಬಾಬು,ಗಾಯಿತ್ರಿ ನಾಗರಾಜ್,ಜ್ಯೋತಿ ನಾರಾಯಣ್,ಶೋಭ ಪುಟ್ಟಸ್ವಾಮಿ, ಅನಿತಾ ವೆಂಕಟೇಶ್ ಹಾಜರಿದ್ದರು