Thursday, July 25, 2024

ಪ್ರಾಯೋಗಿಕ ಆವೃತ್ತಿ

ಗಮನ ಸೆಳೆದ ದಿನೇಶ್ ಗೂಳಿಗೌಡ| ಕಾವೇರಿ ನದಿಗೆ ಕಲುಷಿತ ನೀರು ಸೇರದಂತೆ ತಡೆಯಲು ಸಚಿವರ ಆದೇಶ

ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂಬ ಶಾಸಕ ದಿನೇಶ್ ಗೂಳಿಗೌಡ ಅವರ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಬಗ್ಗೆ  ಚರ್ಚಿಸಿ ವರದಿ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ.

ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಆದೇಶಿಸಿದ್ದಾರೆ.

ಅರಣ್ಯ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಮಿತಿ ರಚಿಸಿ ಎರಡು ವಾರದಲ್ಲಿ ವಿಸ್ತಾರವಾದ ವರದಿ ಸಲ್ಲಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.

ಕಾವೇರಿ ನದಿಗೆ ತ್ಯಾಜ್ಯ ಮಿಶ್ರಿತ ನೀರು ಪೂರೈಕೆ ಆಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಶಾಸಕ ದಿನೇಶ್ ಗೂಳಿಗೌಡ ಅವರು, ಈ ಸಂಬಂಧ ತ್ಯಾಜ್ಯ ಮಿಶ್ರಿತ ನೀರು ತಡೆಗೆ ಕ್ರಮವಹಿಸಿ ತನಿಖಾ ತಂಡ ರಚನೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದರು. ಈ ಮನವಿಗೆ ಸರ್ಕಾರ ತ್ವರಿತವಾಗಿ ಸ್ಪಂದಿಸುವ ಮೂಲಕ ಮಾಲಿನ್ಯಗೊಳ್ಳುತ್ತಿರುವ ಕಾವೇರಿ ನದಿಯ ಶುದ್ಧೀಕರಣಕ್ಕೆ ಸರ್ಕಾರ ಕಾರ್ಯಪ್ರವೃತ್ತವಾದಂತಿದೆ ಹಾಗೂ ಈ ಕುರಿತು ಸರ್ಕಾರದ ಗಮನಕ್ಕೆ ತಂದ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಯತ್ನ ಫಲಿಸಿದಂತಾಗಿದೆ.

ಡಿಸಿಎಂ ಮತ್ತು ಕೈಗಾರಿಕಾ ಸಚಿವರ ಆದೇಶದ ಕುರಿತಂತೆ ಪ್ರತಿಕ್ರಿಯಿಸಿರುವ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಈ ಕುರಿತು ಪರಿಶೀಲಿಸಿ,‌ ಚರ್ಚಿಸಿ  ಕಡತ ಮಂಡಿಸುವುದಾಗಿ ತಿಳಿಸಿದ್ದಾರೆ.

ಸಮಸ್ಯೆ ಬಗ್ಗೆ ಗಮನ ಚೆಲ್ಲಿದ್ದ ಶಾಸಕ ದಿನೇಶ್ ಗೂಳಿಗೌಡ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನದಿಗಳ ಮಾಲಿನ್ಯದ ಬಗ್ಗೆ 2023 ರಲ್ಲಿ ವರದಿ ನೀಡಿದ್ದು, ಅದರಲ್ಲಿ ಕಾವೇರಿ ನದಿಯ ನೀರೂ ಕಲುಷಿತವಾದ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ದಿನೇಶ ಗೂಳಿಗೌಡ ಕಳವಳ ವ್ಯಕ್ತಪಡಿಸಿ ಸಿಎಂ, ಡಿಸಿಎಂ, ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದಿದ್ದರು.

ಕಾವೇರಿ ಕರ್ನಾಟಕದ ಜೀವ ನದಿಯಾಗಿದೆ. ಕುಡಿಯುವ ನೀರು ಪೂರೈಸುವುದು ಮಾತ್ರವಲ್ಲದೇ ಸಾವಿರಾರು ಎಕರೆ ಕೃಷಿ ಭೂಮಿಯನ್ನು ಹಸನು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಕೂಡಲೇ ತಾಂತ್ರಿಕ ಪರಿಣಿತರ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯ ಮಾಡಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!