Sunday, November 22, 2026

ಪ್ರಾಯೋಗಿಕ ಆವೃತ್ತಿ

ಚೆನ್ನೈಗೆ ಅಪ್ಪಳಿಸಲಿದೆ ‘ಮೊಂಥಾ’ ಚಂಡಮಾರುತ ; ಕರ್ನಾಟಕದಲ್ಲೂ 7 ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅ. 27ರ ಹೊತ್ತಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದರಿಂದಾಗಿ ಮುಂದಿನ 2ರಿಂದ 3 ದಿನಗಳ ಕಾಲ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಅ. 25ರಂದು ಆಗ್ನೆಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ಅ. 26ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆಯ ಬುಲೆಟಿನ್‌ ತಿಳಿಸಿದೆ. ಚಂಡಮಾರುತದ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ. 28ರವರೆಗೂ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.

ಏಳು ದಿನಗಳ ಕಾಲ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಪ್ರಕಟಿಸಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 27ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರಂದು ‘ಯೆಲ್ಲೋ ಅಲರ್ಟ್’ ಮತ್ತು 27ರಂದು ‘ಆರೆಂಜ್ ಅಲರ್ಟ್’ ಪ್ರಕಟಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆಯು ಎಚ್ಚರಿಕೆ ನೀಡಿದೆ. 27ರಂದು ಅಲ್ಲಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಾಧ್ಯತೆ ಇದೆ. ಇದೇ ವೇಳೆ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಆ ದಿನ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ವಾತಾವರಣದಲ್ಲಿ ತೀವ್ರ ಬದಲಾವಣೆ ಉಂಟಾಗಿದೆ. ಇದರಿಂದ ಅಕ್ಟೋಬರ್ 27ರಂದು ಭಾರೀ ಮಳೆಯ ಸಾಧ್ಯತೆ ಖಚಿತವಾಗಿದೆ. ಅಕ್ಟೋಬರ್ 28ರಂದು ಕೃಷ್ಣಾ ಜಲಾನಯನ ಪ್ರದೇಶದಲ್ಲಿಯೂ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 24ರಿಂದ ನವೆಂಬರ್ 2ರವರೆಗೆ ಈ ಪ್ರದೇಶದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿಯೂ ಮೋಡಕವಿದ ವಾತಾವರಣ ಮುಂದುವರಿದಿದ್ದು, ಹವಾಮಾನ ಇಲಾಖೆ ಅಕ್ಟೋಬರ್ 25 ಮತ್ತು 26ರಂದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಕರ್ನಾಟಕದಲ್ಲಿ ಅಕ್ಟೋಬರ್ 25ರಿಂದ 29ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 26 ಮತ್ತು 27ರಂದು ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಅಕ್ಟೋಬರ್ ಅಂತ್ಯದವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು, ಮಂಡ್ಯ, ಕೋಲಾರ ಮುಂತಾದ ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಎಚ್ಚರಿಕೆ ಇದೆ.

ಸರ್ಕಾರಿ ಅಧಿಕಾರಿಗಳು ವಿಪತ್ತು ನಿರ್ವಹಣೆಗೆ ಸಿದ್ಧತೆ ಮಾಡಿಕೊಂಡಿದ್ದು, ಜನರು ಸುರಕ್ಷಿತ ಸ್ಥಳಗಳಲ್ಲಿ ಇರಬೇಕು ಎಂದು ಸೂಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯ ತೀವ್ರತೆಯನ್ನು ಗಮನಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ KSNDMC ಸಲಹೆ ನೀಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ