Thursday, September 19, 2024

ಪ್ರಾಯೋಗಿಕ ಆವೃತ್ತಿ

ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶ್ರಮಿಸೋಣ:ಡಿಸಿ

ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಭಾರತ ಸಂವಿಧಾನದ ದಿನಾಚರಣೆಯನ್ನು ಆಚರಿಸೋಣ. ಪ್ರಜಾಪ್ರಭುತ್ವವನ್ನು ಇನ್ನಷ್ಟು ಗಟ್ಟಿಗೊಳಿಸಲು ನಾವೆಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್. ಗೋಪಾಲಕೃಷ್ಣ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆಯ ಕುರಿತು ಅವರು ಮಾತನಾಡಿದರು.

ಭಾರತ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತ ಸಂವಿಧಾನವನ್ನು ರಚಿಸಿ ಅರ್ಪಿಸಿಕೊಂಡಂತಹ ಸುಸಂದರ್ಭವನ್ನು ಪ್ರತಿ ವರ್ಷ ನೆನಪು ಮಾಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಸಂವಿಧಾನ ದಿನಾಚರಣೆ ಆಚರಿಸುತ್ತಿದ್ದೇವೆ ಎಂದರು.

ಪ್ರಜಾಪ್ರಭುತ್ವವನ್ನು ಅರ್ಥ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಅನೇಕ ಕಾರ್ಯಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಶಾಲೆಗಳಲ್ಲಿ ಸಹ ಯುವ ಸಂಸತ್ತು ಎಂಬ ಶೀರ್ಷಿಕೆಯಡಿ ಭಾರತ ಸಂವಿಧಾನದ ಜ್ಞಾನ ಹಾಗೂ ಅರಿವು ಮೂಡಿಸಲು ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಎಂದರು.

ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದ,ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು, ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು – ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನ ಸಭೆಯಲ್ಲಿ 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಮುಜರಾಯಿ ತಹಶೀಲ್ದಾರ್ ಉಮಾ, ಕಚೇರಿ ಹಿರಿಯ ಸಹಾಯಕ ಸ್ವಾಮಿಗೌಡ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!