ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. ಅ.31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ” ಎಂದು ತಿಳಿಸಿದರು.
ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, “ಹೈಕಮಾಂಡ್ ತೀರ್ಮಾನ ನಾವು ಹೇಳಲು ಬರುವುದಿಲ್ಲ. ಅವರು ಏನು ತೀರ್ಮಾನ ಮಾಡುತ್ತಾರೆ ಕಾದು ನೋಡೋಣ. ದಿನನಿತ್ಯ ಮಾಧ್ಯಮದಲ್ಲಿ ಹೇಳಿಕೆ ಕೊಡಬಹುದು ಅಷ್ಟೇ. ಇಲ್ಲಿವರೆಗೆ ಹೈಕಮಾಂಡ್‌ನವರು ಏನಾದರು ಹೇಳಿದ್ದಾರೆಯೇ? ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಮಾಡುತ್ತೇವೆ ಎಂಬುದರ ಬಗ್ಗೆ ಹೈಕಮಾಂಡ್‌ನಿಂದ ಯಾವುದೇ ಮಾಹಿತಿ ಇಲ್ಲ. ಏನಾದರು ಹೈಕಮಾಂಡ್‌ನಿಂದ ಸೂಚನೆ ಬಂದಿದ್ದರೆ ನಾವು ಪ್ರತಿಕ್ರಿಯಿಸಬಹುದು. ಹೈಕಮಾಂಡ್ ತಿಳಿಸುವವರೆಗೂ ಯಾವುದಕ್ಕು ಮಹತ್ವ ಇರುವುದಿಲ್ಲ” ಎಂದರು.




