ಧರ್ಮಸ್ಥಳದ ವಿರುದ್ಧ ಪಿತೂರಿಗಾರರಿಗೆ ವಿದೇಶದಿಂದ ಹಣ ಹರಿದುಬರುತ್ತಿರುವ ಬಗ್ಗೆ ಮಾಹಿತಿ ಇದ್ದು ಇದರ ಹಿಂದೆ ಯಾರಿದ್ದಾರೆ, ಇಡೀ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಎನ್ಐಎ ತನಿಖೆಗೆ ವಹಿಸುವುದು ಸೂಕ್ತ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಮಂಡ್ಯದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಕ್ಷೇತ್ರದ ಬಗ್ಗೆ ಸಾಕಷ್ಟು ತಪ್ಪು ಕಲ್ಪನೆಗಳು, ಅಪಮಾನ ಮಾಡುವ ಕೆಲಸ ನಡೆಯುತ್ತಿದೆ, ಇದೊಂದು ಸಂಘಟಿತ ಪಿತೂರಿ. ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರುವ ಪ್ರಯತ್ನ, ಸಂಚು, ಷಡ್ಯಂತ್ರದಂತೆ ಕಂಡು ಬರುತ್ತಿದೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಧರ್ಮಸ್ಥಳದ ವಿರುದ್ಧ ಷಡ್ಯಂತ್ರವಿರುವುದನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸಬೇಕು. ಪಿತೂರಿಗಾರರು ಯಾರು, ಅವರಿಗೆ ಹಣ ಪೂರೈಸುತ್ತಿರುವವರು ಯಾರು, ವಿದೇಶಿ ಹಣದ ಮೂಲ ಯಾವುದು ಎನ್ನುವುದು ಬೆಳಕಿಗೆ ತರುವ ಅಗತ್ಯವಿದೆ. ಹಾಗಾಗಿ ರಾಜ್ಯಸರ್ಕಾರ ಎನ್ಐಎಗೆ ವಹಿಸುವಂತೆ ಒತ್ತಾಯಿಸಿದರು.
ಧರ್ಮಸ್ಥಳ ಯಾತ್ರೆ
ಧರ್ಮಸ್ಥಳ ಪ್ರಕರಣದಿಂದ ಸಾಕಷ್ಟು ಅಪಮಾನ, ನೋವುಂಟಾಗಿದ್ದರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸೇರಿದಂತೆ ಅವರ ಕುಟುಂಬ ನಡೆದುಕೊಂಡ ರೀತಿ, ವಹಿಸಿದ ತಾಳ್ಮೆ, ಸಹನೆ, ಕೈಗೊಂಡ ತೀರ್ಮಾನಗಳು ಮೆಚ್ಚುವಂತಿವೆ. ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಆ.31ರಂದು ಜೆಡಿಎಸ್ ಪಕ್ಷದಿಂದ ಧರ್ಮಸ್ಥಳ ಸತ್ಯ ಯಾತ್ರೆಯನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು.
ಹಾಸನದಿಂದ ಜೆಡಿಎಸ್ ಪಕ್ಷದ ನಾಯಕರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಬಸ್ಗಳ ಮೂಲಕ ಧರ್ಮಸ್ಥಳಕ್ಕೆ ತೆರಳಿ ನೇತ್ರಾವತಿ ನದಿ ದಡದಿಂದ ಶ್ರೀ ಮಂಜುನಾಥನ ದೇವಾಲಯದವರೆಗೆ ಪಾದಯಾತ್ರೆ ನಡೆಸಲಾಗುವುದು. ಧರ್ಮಾಽಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನೈತಿಕ ಸ್ಥೈರ್ಯ ತುಂಬುವುದಾಗಿ ತಿಳಿಸಿದರು.
ಜೆಡಿಎಸ್ ನಡೆಸುತ್ತಿರುವ ಯಾತ್ರೆ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ. ಇದರೊಳಗೆ ರಾಜಕಾರಣವನ್ನು ಬೆರೆಸುವುದೂ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಪಾತ್ರವಾಗಿರುವ ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಗೋಷ್ಠಿಯಲ್ಲಿ ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಮಾಜಿ ಶಾಸಕ ಕೆ.ಅನ್ನದಾನಿ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮನ್ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರ ಸೇರಿದಂತೆ ಇತರರಿದ್ದರು.




