Monday, November 23, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ | ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ, ಕಾನೂನು ಕ್ರಮ ಕೈಕೊಳ್ಳಲಿದೆ ಎಂದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಎಸ್ ಐ ಟಿ ತನಿಖೆಯಾಗಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯು ಕಾಂಗ್ರೆಸ್ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ. ನಾಳೆ ಮೈಸೂರಿನಲ್ಲಿ ನಡೆಯುತ್ತಿರುವ ಸಮಾವೇಶ, ಕಾಂಗ್ರೆಸ್ ಸರ್ಕಾರ ಮಾಡಿರುವ ಜನಪರ ಕೆಲಸವನ್ನು ಜನರ ಮುಂದಿಡುವ ಕಾರ್ಯಕ್ರಮವಾಗಿದೆ. ಈ ಸಮಾವೇಶ ಕುರಿತು ಬಿಜೆಪಿ ಮುಖಂಡರು ಟೀಕಿಸುತ್ತಿದ್ದಾರೆ. ನಾಳೆ ಸುಮಾರು 2600 ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತಿದ್ದು,  ಬಿಜೆಪಿಯವರು ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ನಗರ ಪ್ರದೇಶದ ಮತದಾರರಲ್ಲಿ ಕಾಂಗ್ರೆಸ್ ಪರವಾದ ಒಲವು ಕಡಿಮೆ ಆಗುತ್ತಿದೆಯಾ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ. ನಾಳಿನ ಕಾರ್ಯಕ್ರಮ ಯಾರದೇ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ಅದು ಅಭಿವೃದ್ಧಿಯ ಕಾರ್ಯಕ್ರಮ ಎಂದರು.

ಕೃಷ್ಣಾ ನದಿ ನೀರು ಹಂಚಿಕೆ; ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ:

ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿಯನ್ನು ವಿಸ್ತರಿಸಿರುವ ಬಗ್ಗೆ ಯಾವುದೇ ವಿರೋಧವಿಲ್ಲ. ಆದರೆ ನೀರು ಹಂಚಿಕೆಯ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಅಧಿಸೂಚನೆ ಹೊರಡಿಸಿಲ್ಲ. ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ನಡುವೆ ಅಂತರ ರಾಜ್ಯ ಜಲವಿವಾದವಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ನೀರು ಹಂಚಿಕೆಯ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಯಾವುದೇ ಅಡ್ಡಿಯಿರುವುದಿಲ್ಲ ಮತ್ತು ತೀರ್ಪಿನನ್ವಯ ನೀರಿನ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾವುದೇ ನಷ್ಟವೂ ಆಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀ  ಗಳಿಗೆ ಹೆಚ್ಚಿಸಲು ಅನುಮತಿ ನೀಡಿದ್ದಾರೆ ಎಂದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟದಲ್ಲಿ ತನಿಖಾ ವರದಿಯ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಹೆಸರಿಗೆ ಕಾಂಗ್ರೆಸ್ ಸೂಚಿಸಲಿ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಈ ರೀತಿ ಹೇಳಿಕೆ ನೀಡುತ್ತಿರುವ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷಗಿರಿಯನ್ನು ಎಸ್ ಸಿ ವರ್ಗದವರಿಗೆ ಬಿಟ್ಟುಕೊಡಲಿ ಮತ್ತು ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಗೆ ಸೇರಿದವರಿಗೆ ಮೊದಲು ಬಿಟ್ಟುಕೊಡಲಿ ಎಂದು ತಿರುಗೇಟು ನೀಡಿದ ಮಖ್ಯಮಂತ್ರಿಗಳು  ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಪಕ್ಷವೇ ಹೊರತು ಬಿಜೆಪಿ ಪಕ್ಷವಲ್ಲ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ