Sunday, November 22, 2026

ಪ್ರಾಯೋಗಿಕ ಆವೃತ್ತಿ

ಧ್ರುವ ನಾರಾಯಣ್ ನಿಧನ ದಿಗ್ಭ್ರಮೆ ಮೂಡಿಸಿದೆ : ವಿಜಯ್ ರಾಮೇಗೌಡ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಅವರು ತೀವ್ರ ಹೃದಯಾಘಾತ ದಿಂದ ನಿಧನರಾಗಿರುವುದು ದಿಗ್ಭ್ರಮೆ ಉಂಟು ಮಾಡಿದೆ ಎಂದು ಸಮಾಜ‌ ಸೇವಕ, ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ ಕಂಬನಿ ಮಿಡಿದರು.

ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಎಸ್ಸಿ ಘಟಕದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಏರ್ಪಡಿಸಿದ್ದ ಧ್ರುವ ನಾರಾಯಣ್ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಧ್ರುವನಾರಾಯಣ್ ಅವರು 2004 ಮತ್ತು 2008ರಲ್ಲಿ ಸತತವಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸಂತೆಮರಹಳ್ಳಿ‌ ಕ್ಷೇತ್ರದಿಂದ ಕೇವಲ ಒಂದು ಮತದಿಂದ ಎ.ಆರ್.ಕೃಷ್ಣಮೂರ್ತಿ ಅವರನ್ನು ಸೋಲಿಸಿದ್ದರು. 2009 ಹಾಗೂ 2014ರಲ್ಲಿ ಎ.ಆರ್‌.ಕೃಷ್ಣಮೂರ್ತಿ ಅವರ ವಿರುದ್ಧ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದರು. ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ, ಸರಳ ಸಜ್ಜನ ವ್ಯಕ್ತಿ ಧ್ರುವ ನಾರಾಯಣ್ ಎಲ್ಲಾ ಪಕ್ಷಗಳ ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಅಜಾತಶತ್ರು ಎಂದರೆ ತಪ್ಪಾಗಲಾರದು ಎಂದರು.

2023ರ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಕಳೆದ ಲೋಕಸಭಾ ಚುನಾವಣೆಯಲ್ಲಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಸೋಲನ್ನು ಅನುಭವಿಸಿದರೂ, ಚಾಮರಾಜನಗರ ಜಿಲ್ಲೆಯಲ್ಲಿ ಉತ್ತಮ ಹೆಸರನ್ನು ಗಳಿಸಿದ್ದರು. ಪಕ್ಷಾತೀತವಾಗಿ ಎಲ್ಲರ ಮನಸ್ಸನ್ನು ಗೆದ್ದಿದ್ದರು. ಇಂತಹ ಅಪರೂಪದ ರಾಜಕಾರಣಿ, ವರ್ಣ ರಂಜಿತ ವ್ಯಕ್ತಿತ್ವವುಳ್ಳ ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ನಷ್ಟ ಉಂಟಾಗಿದೆ.ಧ್ರುವನಾರಾಯಣ್ ಅಗಲಿಕೆಯಿಂದ ತುಂಬಾ ನೋವಿನಲ್ಲಿರುವ ಕುಟುಂಬ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ.ಧ್ರುವನಾರಾಯಣ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಡಿ. ಪ್ರೇಂಕುಮಾರ್, ಪ್ರವೀಣ್,ಸುಗುಣ ಸ್ನೇಹಿತ ರಮೇಶ್, ರವೀಂದ್ರಬಾಬು, ತಾ.ಪಂ.ಮಾಜಿ ಸದಸ್ಯ ಮಾಧವಪ್ರಸಾದ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಡಿ.ಎಂ.ಮಹೇಂದ್ರ, ಎಸ್ಸಿ ಘಟಕದ ಅಧ್ಯಕ್ಷ ರಾಜಯ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ