Thursday, September 19, 2024

ಪ್ರಾಯೋಗಿಕ ಆವೃತ್ತಿ

ಸ್ವಾತಂತ್ರ್ಯ ದಿನಾಚರಣೆಯಂದು ಅಧಿಕಾರಿಗಳು ಗೈರಾದರೆ ಶಿಸ್ತು ಕ್ರಮ

ಆಗಸ್ಟ್ 15ರಂದು ನಡೆಯಲಿರುವ 75 ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮಕ್ಕೆ ಸಕಾ೯ರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಗೈರಾದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ತಹಶೀಲ್ದಾರ್ ವಿಜಯಣ್ಣ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಗಸ್ಟ್ 15ರಂದು ನಡೆಯಲಿರುವ 75ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದರಿಂದ ಎಲ್ಲಾ ಸರ್ಕಾರಿ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು.

ತಾಲ್ಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಳಿರು ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಗಳಿಂದ ಆಲಂಕರಿಸಬೇಕು. ತಮಗೆ ತಿಳಿಸಿರುವ ಜವಾವ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ನಿಯಾನುಸಾರವಾಗಿ ತ್ರಿವರ್ಣ ಧ್ವಜವನ್ನು ಕಟ್ಟಬೇಕು. ಕಾರ್ಯಕ್ರಮದಲ್ಲಿ ವ್ಯತ್ಯಾಸ ಕಂಡು ಬಂದರೇ ಜವಾಬ್ದಾರಿ ವಹಿಸಿಕೊಂಡಿರುವ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆಂದು ಹೇಳಿದರು.

ವಿದ್ಯಾರ್ಥಿಗಳಿಂದ ಜಾಥ, ಸಾಂಸ್ಕೃತಿಕ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಲಘು ಉಪಹಾರ, ಸಿಹಿ ವಿತರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸ್ವಾತಂತ್ರ‍್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಅಂದು ಸಂಜೆ 4 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಮಳೆ ಹಾನಿ ಬಗ್ಗೆ ಮಾಹಿತಿ ಕೊಡಿ
ಹೇಮಾವತಿ ಮತ್ತು ಕೃಷ್ಣರಾಜಸಾಗರ ಜಲಾನಯ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನೀರನ್ನು ಜಲಾಶಯದಿಂದ ಹೊರ ಬಿಡುತ್ತಿರುವುದರಿಂದ ಹಾಗೂ ತಾಲ್ಲೂಕಿನಾಧ್ಯಂತ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲು ತಾಲ್ಲೂಕು ಕಚೇರಿಯಲ್ಲಿ24*7 ನಿಯಂತ್ರಣಾ ಕೊಠಡಿ ತೆರೆಯಲಾಗಿದೆ. ಸಾರ್ವಜನಿಕರು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಯಾವುದೇ ರೀತಿಯ ಅವಘಡಗಳು ಸಂಭವಿಸಿದರೆ ದೂರವಾಣಿ ಸಂಖ್ಯೆ 08231-242277 ಇಲ್ಲಿಗೆ ಮಾಹಿತಿ ನೀಡಬೇಕೆಂದು ತಿಳಿಸಿದರು.

ಬೆಳೆ ಹಾನಿಬಗ್ಗೆ ವರದಿ ನೀಡಿ

ಬೆಳೆ ಹಾನಿ ಬಗ್ಗೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಬೇಕು. ವರದಿ ಪರಿಶೀಲಿಸಿ ಮೂರು ದಿನಗಳಲ್ಲಿ ರೈತರಿಗೆ ಪರಿಹಾರ ವಿತರಣೆ ಮಾಡಲಾಗುವುದು. ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಆಗುವ ಅನಾಹುತಕ್ಕೆ ನೀವೇ ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮಳೆ ಹೆಚ್ಚಾಗಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿಯಿದ್ದು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಸಾರ್ವಜನಿಕರು ಸಹ ಆರೋಗ್ಯದ ಬಗ್ಗೆ ಜಾಗೃತಿ ವಹಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!