Friday, November 20, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ಬಂದ್ ಗೆ ಮಂಡ್ಯದಲ್ಲಿ ನೀರಸ ಪ್ರತಿಕ್ರಿಯೆ ; ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ಕೆಎಸ್ಆರ್’ಟಿಸಿ ನಿರ್ವಾಹಕನ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಪರವಾಗಿ ಆಗಬೇಕಾದ ವಿಷಯಗಳ ಕುರಿತು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಮದ್ದೂರು ಪಟ್ಟಣ ಹೊರತುಪಡಿಸಿ ಮಂಡ್ಯ ಜಿಲ್ಲಾದ್ಯಂತ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ. ಮಂಜುನಾಥ್, ರೈತ ನಾಯಕಿ ಸುನಂದಾ ಜಯರಾಂ, ಜಯ ಕರ್ನಾಟಕ ಸಂಘಟನೆಯ ಯೋಗಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ, ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘದ ಸಂಸ್ಥಾಪಕ ಎಚ್.ಎಸ್. ಚಂದ್ರಶೇಖರ್ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ರಾಜ್ಯ ರಸ್ತೆ ಸಾರಿಗೆ ಬಸ್‌ಗಳನ್ನು ತಡೆದು ಪ್ರತಿಭಟಿಸಿದರು.

ಕರ್ನಾಟಕ ರಾಜ್ಯ ರೈತಪರ ಹೋರಾಟಗಾರರ ಸಂಘದ ಸಂಸ್ಥಾಪಕ ಎಚ್.ಎಸ್.ಚಂದ್ರಶೇಖರ್ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಲಗಿ ರಾಜ್ಯ ಸರ್ಕಾರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಜೆ.ಸಿ. ವೃತ್ತದಿಂದ ನಗರದ ಹೊಳಲು ವೃತ್ತ, ಪೇಟೆ ಬೀದಿ, ವಿ.ವಿ. ರಸ್ತೆಗಳಲ್ಲಿ ಬೈಕ್ ರ‍್ಯಾಲಿ ನಡೆಸಿದ ಕನ್ನಡಪರ ಹೋರಾಟಗಾರರು, ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿದರು.

ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯವರು ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದು, ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು, ಬೆಂಗಳೂರಿಗೆ ಕುಡಿಯುವ ನೀರಿನ ಹೆಸರಿನಲ್ಲಿ 6ನೇ ಹಂತದ ಯೋಜನೆ ಮೂಲಕ ರೈತರ ಒಂದು ಬೆಳೆಯ ನೀರನ್ನು ನೀಡಿ ರೈತರನ್ನು ಬೀದಿಗೆ ತಳ್ಳುವ ಯೋಜನೆ ಕೈ ಬಿಡಬೇಕು, ಮೇಕೆದಾಟು ಯೋಜನೆ ಪ್ರಾರಂಭ, ಮಹಾದಾಯಿ, ಕಳಸ ಬಂಡೂರಿ ಯೋಜನೆಯನ್ನು ಶೀಘ್ರ ಕೈಗೆತ್ತಿಕೊಳ್ಳಬೇಕು ಹಾಗೂ ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದರು.

ಬಂದ್‌ಗೆ ಹಲವು ಸಂಘಟನೆಗಳು ಕರೆ ನೀಡಿದ್ದವಾದರೂ ಪೇಟೆಬೀದಿ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬಂದ್ ಕಂಡು ಬರಲಿಲ್ಲ. ಎಂದಿನಂತೆ ಎಲ್ಲ ಅಂಗಡಿಗಳ ಮಾಲೀಕರು ತಮ್ಮ ತಮ್ಮಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ