Thursday, July 25, 2024

ಪ್ರಾಯೋಗಿಕ ಆವೃತ್ತಿ

ಖ್ಯಾತ ಸಾಹಿತಿ ಡಾ.ಕಮಲ ಹಂಪನಾ ನಿಧನ

ಕನ್ನಡದ ಖ್ಯಾತ ಸಾಹಿತಿ, ನಾಡೋಜ ಡಾ. ಕಮಲ ಹಂಪನಾ ಅವರು ಇಂದು(ಜೂನ್ 22) ಬೆಳಗಿನ ಜಾವ ರಾಜರಾಜೇಶ್ವರಿ ನಗರದ ತಮ್ಮ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಯುತರಿಗೆ 89 ವರ್ಷ ವಯಸ್ಸಾಗಿತ್ತು.

ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು ತಮ್ಮ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ . ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಶ್ರೀಯುತರು ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಹಂಪನಾ ಅವರ ನಿಧನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10 ರಿಂದ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನಮಾಡಿದ್ದಾರೆ.

ಬೆಂಗಳೂರಿನ ದೇವನಹಳ್ಳಿಯಲ್ಲಿ ಸಿ. ರಂಗಧಾಮನಾಯಕ್-ಲಕ್ಷಮ್ಮ ದಂಪತಿಗಳ ಪುತ್ರಿಯಾಗಿ ಕಮಲಾ ಹಂಪನಾ ಅವರು 28-10-1935ರಲ್ಲಿ ಜನಿಸಿದರು. ತುಮಕೂರಿನಲ್ಲಿ ಶಾಲಾ ಶಿಕ್ಷಣ, ಮೈಸೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಬೆಂಗಳೂರಿನ ವಿಜಯನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿದರು.

ಸರ್ಕಾರಿ ಸೇವೆಯಿಂದ ನಿವೃತ್ತರಾದ ಮೇಲೆ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ, ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರೂ, ಅಧ್ಯಕ್ಷರೂ, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕರೂ ಆಗಿ ಸೇವೆ ಸಲ್ಲಿಸಿದ್ದರು.

2003 ರಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಮಲಾ ಹಂಪನಾ ಅಧ್ಯಕ್ಷರಾಗಿದ್ದರು.

ಕಥಾ ಸಂಕಲನಗಳಾದ ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ಸಂಶೋಧನಾ ಕೃತಿಗಳಾದ ತುರಂಗ ಭಾರತ – ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ, ಬದ್ದವಣ,ರೋಣದ ಬಸದಿ ಸೇರಿ ಶಿಶು ಸಾಹಿತ್ಯ, ಅನುವಾದಗಳು, ಕಾದಂಬರಿಗಳು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ.

ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕಗಳನ್ನು ರಚಿಸಿದ್ದಾರೆ.

ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವ ಕಮಲಾ ಹಂಪನಾ ಕನ್ನಡದ ಹೆಮ್ಮೆ. ಕರ್ನಾಟಕ ಸರ್ಕಾರ ಅವರ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ. ಇವೆಲ್ಲದಕ್ಕೂ ಕಿರೀಟಪ್ರಾಯವಾಗಿದೆ.ಜಗತ್ತಿನ ಅಯ್ದು ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತಾರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಇಡೀ ಭಾರತದ ಪರವಾಗಿ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿ ಸೇರಿದೆ.

ಅವರು ಪಟ್ಟ ಶ್ರಮ, ನಡಸಿದ ನಿರಂತರ ಹೋರಾಟ, ಮಾಡಿದ ಸಾಧನೆಗಳು ಹಲವಾರು. ಅವರ ಪರಿಶ್ರಮದ ಫಲವಾಗಿ ಕರ್ನಾಟಕ ಸರ್ಕಾರ ಪ್ರತಿವರ್ಷ ಲೇಖಕಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ನಗದನ್ನೂ ಒಳಗೊಂಡ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಯನ್ನು ನೀಡುತ್ತಿದೆ.

ಕಮಲಾ ಹಂಪನಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ,ಬಾಬಾ ಆಮ್ಟೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಚಾವುಂಡರಾಯ ಪ್ರಶಸ್ತಿ,ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಗೌರವ ಡಾಕ್ಟರೇಟ್,ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿ, ಅನುಪಮಾ ನಿರಂಜನ ಪ್ರಶಸ್ತಿ,ಸಿದ್ದಾಂತಕೀರ್ತಿ ವಿದ್ವತ್ ಪ್ರಶಸ್ತಿ,ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಸಂದಿವೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!