Thursday, November 19, 2026

ಪ್ರಾಯೋಗಿಕ ಆವೃತ್ತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಅವಶ್ಯಕತೆ ಇಲ್ಲ ; ಡಾ.ಪರಮೇಶ್ವರ್

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಹೇಳಿದರು.

ಬೆಂಗಳೂರು ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ.‌ ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ತನಿಖೆಯ ವರದಿ ಬಂದ ನಂತರ ಏನು‌ ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.

ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ.‌ ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ‌ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದರು.

ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಆರೋಪ ಕೇಳಿ ಬಂದಿದೆ. ಸದ್ಯ ಈ ಪ್ರಕರಣ ರಾಜಕೀಯ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ. ಈ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ