Sunday, May 19, 2024

ಪ್ರಾಯೋಗಿಕ ಆವೃತ್ತಿ

ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ: ಡಾ.ಕುಮಾರ

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ತಹಶೀಲ್ದಾರರು ಮತ್ತು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದು ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ನೀರು ಪಡೆಯುವ ಮೊದಲು ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಭಿಯಂತರರು ಲಭ್ಯವಿರುವ ಬೋರ್ ವೆಲ್ ಗಳಲ್ಲಿ ನೀರು ಪಡೆಯಲು ಸಾಧ್ಯವಿಲ್ಲ ಎಂದು ದೃಢೀಕರಣ ನೀಡಬೇಕು. ನಂತರ ಅನುಮೋದನೆಯಾಗಿರುವ ದರಗಳಂತೆ ಖಾಸಗಿ ಬೋರ್ ವೆಲ್ ನಿಂದ ನೀರು ಪಡೆಯಬೇಕು ಎಂದರು.

ಗ್ರಾಮದಲ್ಲಿ ಇರುವ ಜನಸಂಖ್ಯೆ, ಬೋರ್ ವೆಲ್ ಗಳ ಸಂಖ್ಯೆ, ಮುಂದಿನ ಒಂದು ತಿಂಗಳಲಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮ, ಕಳೆದ 3-4 ವರ್ಷಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಗ್ರಾಮ, ಸಮಸ್ಯೆ ಉಂಟಾದಲ್ಲಿ ಪರಿಹರಿಸಲು ಲಭ್ಯವಿರುವ ನೀರಿನ ಮೂಲ ಕುರಿತಂತೆ ವಿಸ್ತೃತ ಪಟ್ಟಿಯನ್ನು ಗ್ರಾಮ ವಾರು ಸಿದ್ಧಪಡಿಸಿಕೊಳ್ಳಿ ಎಂದರು.

ಖಾಸಗಿ ಬೋರ್ ವೆಲ್ ಮೂಲಕ ಸಹ ನೀರು ಒದಗಿಸಲು ಲಭ್ಯವಿಲ್ಲದಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಬೇಕಾಗುತ್ತದೆ. ಇದಕ್ಕೆ ದರ ನಿಗದಿ ಮಾಡಲು ಟೆಂಡರ್ ಆಹ್ವಾನಿಸಿ ದರ ನಿಗದಿ ಮಾಡಬೇಕು. ಟ್ಯಂಕರ್ ಮೂಲಕ‌ ನೀರು ಒದಗಿಸಿದ ಟ್ರಿಪ್ ಗಳ ವಿವರವನ್ನು ಆ್ಯಪ್ ನಲ್ಲಿ ಅಪ್ ಲೋಡ್ ಮಾಡಬೇಕು ಕೃತಕ ನೀರಿನ ಅಭಾವ ಉಂಟು ಮಾಡುವ ಸಾಧ್ಯತೆ ಇರುತ್ತದೆ. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದರು.

ಶಾಸಕರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆಗಳನ್ನು ನಡೆಸಿ. ಪ್ರತಿ ತಾಲ್ಲೂಕಿಗೆ ನಿಯೋಜಬೆಯಾಗಿರುವ ನೋಡಲ್ ಅಧಿಕಾರಿಗಳು ತಪ್ಪದೇ ಸಭೆಯಲ್ಲಿ ಭಾಗವಹಿಸಿ ಎಂದರು.

ತಹಶೀಲ್ದಾರ್ ಗಳಿಂದ ನೀರಿನ ಸಮಸ್ಯೆ ಇರುವ ಗ್ರಾಮಗಳ ಬಗ್ಗೆ ತಾಲ್ಲೂಕುವಾರು ಮಾಹಿತಿ ಪಡೆದುಕೊಂಡರು. ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕರು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆ ಇಲ್ಲ ಎಂದು ಸಭೆಗೆ ಮಾಹಿತಿ ನೀಡಿದರು. ಪಶು ವೈದ್ಯಾಧಿಕಾರಿಗಳು 23 ವಾರಗಳಿಗೆ ಜಾನುವಾರುಗಳಿಗೆ ಮೇವಿನ ಲಭ್ಯತೆ ಇರುವುದಾಗಿ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿಗಳು ಬರ ಮತ್ತು ಬೇಸಿಗೆ ಸಂದರ್ಭದಲ್ಲಿ ಬೇಕಿರುವ ಔಷಧಿಗಳ ಲಭ್ಯತೆಯ ಬಗ್ಗೆ ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ಇದೇ ರೀತಿ ಮಳೆಯ ಕೊರತೆ ಉಂಟಾದಲ್ಲಿ ನೀರಿನ ಬಳಕೆಯ ಜೀವನಶೈಲಿ ಬದಲಾವಣೆ ಮಾಡಬೇಕಾಗುತ್ತದೆ. ಈ ಕುರಿತು ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರೊಂದಿಗೆ ನೀರು ಪೋಲಾಗದಂತೆ ಮಿತವಾಗಿ ಬಳಸುವ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿರುವ ಕೆರೆಗಳಿಗೆ ಕುಡಿಯುವ ನೀರು ಒದಗಿಸಲು ತುಂಬಿಸಲಾಗಿದೆ. ಆದರೆ ಅದನ್ನು ಮೋಟರ್ ಬಳಸಿ ಬೆಳೆಗಳಿಗೆ ಬಳಸಲಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಕುಮಾರ್, ತಹಶೀಲ್ದಾರ್ ಶಿವಕುಮಾರ್ ಬಿರಾದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ. ವಿ. ಎಸ್. ಅಶೋಕ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ರೂಪಶ್ರೀ, ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಡಾ. ಸುರೇಶ್, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಪುನೀತ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!