Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಲೋಕಸಭಾ ಚುನಾವಣೆಗೆ ಮಾ.28ಕ್ಕೆ ಅಧಿಸೂಚನೆ; ಅಂದೇ ನಾಮಪತ್ರ ಸಲ್ಲಿಕೆ ಆರಂಭ

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಮಂಡ್ಯ ಜಿಲ್ಲಾಡಳಿತ ಸಜ್ಜಾಗಿದ್ದು, ಮಾ.28 ರಂದು ಅಧಿಸೂಚನೆ ಹೊರಡಿಸಲಾಗುವುದು, ಅಂದಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯೂ ಆದ ಡಾ.ಕುಮಾರ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಘೋಷಣೆಯಾಗಿರುವ ವೇಳಾಪಟ್ಟಿಯಂತೆ ಚುನಾವಣಾ ಪ್ರಕ್ರಿಯೆ ನಡೆಯಲಿದ್ದು, ಗುರುವಾರ ಅಧಿಸೂಚನೆ ಹೊರಡಿಸಿದ ನಂತರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ರಜಾ ದಿನ ಹೊರತುಪಡಿಸಿ ಏ.4ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ ಎಂದರು.

ಏ.26ಕ್ಕೆ ಮತದಾನ

ಏ.5 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ 8 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ, ಏ 26ರಂದು ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದ್ದು, ಮತ ಎಣಿಕೆಯ ಜೂನ್ 4 ರಂದು ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಕೇಂದ್ರ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಮೊದಲ ಮಹಡಿಯ ಕೊಠಡಿ ಸಂಖ್ಯೆ 29 ರಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ, ನಾಮಪತ್ರ ಸ್ವೀಕೃತಿ ಕೇಂದ್ರದ 100 ಮೀಟರ್ ಸುತ್ತಳತೆ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದ್ದು, ನಾಮಪತ್ರ ಸಲ್ಲಿಕೆ ವೇಳೆ ನಿಷೇಧಿತ ಪ್ರದೇಶಕ್ಕೆ ಮೂರು ವಾಹನ ಗಳಿಗೆ ಮಾತ್ರ ಪ್ರವೇಶಿಸಲು ಅವಕಾಶ ಇರಲಿದೆ, ಚುನಾವಣಾ ಅಧಿಕಾರಿಗಳ ಕಚೇರಿಗೆ ನಾಮಪತ್ರ ಸಲ್ಲಿಸಲು ಅಭ್ಯರ್ಥಿ ಸೇರಿದಂತೆ ಐದು ಮಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ, ನಾಮಪತ್ರ ಸ್ವೀಕೃತಿ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡಿಂಗ್ ಮಾಡಲಾಗುವುದು, ನಾಮಪತ್ರ ಸಲ್ಲಿಸಲು ಅವಶ್ಯ ಇರುವ ದಾಖಲೆ ಮತ್ತು ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಚುನಾವಣಾ ಅಧಿಕಾರಿಗಳ ಕಾರ್ಯಾಲಯದಲ್ಲಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 2,074 ಮತಗಟ್ಟೆಗಳಿದ್ದು, ಈ ಪೈಕಿ 252 ಮತಗಟ್ಟೆ ಮೈಸೂರು ಜಿಲ್ಲೆಯ ಕೆ ಆರ್ ನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಾಗಿವೆ, ಮಂಡ್ಯ ಜಿಲ್ಲೆಯಲ್ಲಿ 1,824 ಮತಗಟ್ಟೆಗಳಿವೆ ಎಂದು ಹೇಳಿದರು.

ಲೋಕಸಭಾ ಕ್ಷೇತ್ರದ ಆಯಾ ವಿಧಾನಸಭಾ ವಲಯದಲ್ಲಿ ಮತಯಂತ್ರಗಳ ಮಸ್ಟರಿಂಗ್, ಡಿ ಮಸ್ಟ ರಿಂಗ್ ನಡೆಯಲಿದ್ದು, ಮಳವಳ್ಳಿ ಶಾಂತಿ ಪಿಯು ಕಾಲೇಜು, ಮದ್ದೂರು ಎಚ್ ಕೆ ವೀರಣ್ಣಗೌಡ ಪಿಯು ಕಾಲೇಜು, ಪಾಂಡವಪುರ ಟಿಎಸ್ಎಸ್ ಕೆ ಪ್ರೌಢಶಾಲೆ, ಮಂಡ್ಯ ನಗರದ ಮಂಡ್ಯ ವಿಶ್ವವಿದ್ಯಾನಿಲಯ, ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೆ ಆರ್ ಪೇಟೆಯ ಕೆ ಆರ್ ಪೇಟೆ ಕೃಷ್ಣ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಹಾಗೂ ಕೆ ಆರ್ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಸ್ಟ ರಿಂಗ್, ಡಿ ಮಸ್ಟರಿಂಗ್ ನಡೆಯಲಿದ್ದು, ಮತ ಎಣಿಕೆ ಮಂಡ್ಯ ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಕಾಮರ್ಸ್ ಬ್ಲಾಕ್ ನಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಚ್ ಎಸ್ ನಿರ್ಮಲ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!