Saturday, November 21, 2026

ಪ್ರಾಯೋಗಿಕ ಆವೃತ್ತಿ

ಸಮಸಮಾಜ ಬಯಸದವರಿಂದ ಸಮೀಕ್ಷೆಗೆ ವಿರೋಧ : ಸಿಎಂ ಸಿದ್ದರಾಮಯ್ಯ

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನೂ ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆಯವರೆಗೆ ಶೇ.63ರಷ್ಟು ಸಮೀಕ್ಷೆ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆಯವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ

ಕೊಪ್ಪಳ ಜಿಲ್ಲೆಯಿಂದ ಶೇ.97ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂದು ಸಿಎಂ ಮಾಹಿತಿ ನೀಡಿದರು. ಕೊಪ್ಪಳದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನರು ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಸಿಎಂ, ಜನತೆಗೆ ಧನ್ಯವಾದ ಹೇಳಿದರು.

ಬಲ್ಡೋಟಾ ಕಾರ್ಖಾನೆ ವಿರುದ್ದ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್‌ಪಿಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿನಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಲ್ಹಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು? ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು? ಎಂಬುದಕ್ಕೆ ಉತ್ತರಿಸಿದ ಸಿಎಂ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ