ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಮ್ಮುಖದಲ್ಲಿ ಇಂದು ಪ್ರಮುಖ ನಾಯಕರ ಸಭೆ ನಡೆಸಲಾಯಿತು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಮಂಡ್ಯ ಜೆಡಿಎಸ್ ಶಾಸಕರು ಭೇಟಿಯಾಗಿ ಆರೋಗ್ಯ ಮತ್ತು ಯೋಗಕ್ಷೇಮವನ್ನು ಇಂದು ವಿಚಾರಿಸಿದ್ದಾರೆ.
ಮದ್ದೂರಿನ ಶಾಸಕ ಡಿ.ಸಿ.ತಮ್ಮಣ್ಣ, ಮಳವಳ್ಳಿ ಶಾಸಕ ಡಾ. ಕೆ. ಅನ್ನದಾನಿ, ಮಂಡ್ಯ ಶಾಸಕ ಎಂ.ಶ್ರೀನಿವಾಸ್, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ, ಪಾಂಡವಪುರ ಶಾಸಕ ಪುಟ್ಟರಾಜು, ನಾಗಮಂಗಲ ಶಾಸಕ ಸುರೇಶ್ ಗೌಡ ಮತ್ತು ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ ಹೆಚ್.ಡಿ. ದೇವೇಗೌಡರ ಮನೆಯಲ್ಲಿ ಎಲ್ಲರೂ ಒಟ್ಟಾಗಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದ್ದಾರೆ.
ಹೆಚ್.ಡಿ. ದೇವೇಗೌಡರು ಏಳು ಕ್ಷೇತ್ರಗಳ ಪ್ರಚಾರಕ್ಕೆ ನಾನೇ ಬರುತ್ತೇನೆ ಎಂದು ಶಾಸಕರ ಬಳಿ ಮಾತನಾಡಿದ್ದಾರೆ. ನಂತರ ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳಲ್ಲಿ ಗೆಲ್ಲಲು ಶಾಸಕರಿಗೆ ಸೂಚನೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಪಕ್ಷ ಸಂಘಟನೆಯ ಬಗೆಗೆ ಕೂಡ ಮಾಜಿ ಪ್ರಧಾನಿ ದೇವೇಗೌಡರು ಶಾಸಕರಿಗೆ ಸೂಚನೆಯನ್ನು ನೀಡಿದ್ದು, ಜೆಡಿಎಸ್ ವರಿಷ್ಠರು ಪಂಚರತ್ನಯಾತ್ರೆಗೂ ಬರುತ್ತೇನೆ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರಮುಖ ಶಾಸಕರ ಸಭೆಯಲ್ಲಿ ಪ್ರಸ್ತುತ ರಾಜಕಾರಣದ ಸ್ಥಿತಿಗತಿಗಳ ಬಗೆಗೆ ಚರ್ಚಿಸಲಾಗಿದೆ. ಹೆಚ್.ಡಿ.ದೇವೇಗೌಡರು ಮಂಡ್ಯ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುವ ಬಗೆಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಮತ್ತು ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ದಿಯ ಕುರಿತು ಸುದೀರ್ಘವಾಗಿ ಚರ್ಚಿಸಲಾಗಿದೆ ಎಂದು ಮದ್ದೂರಿನ ಜೆಡಿಎಸ್ ಶಾಸಕ ಡಿ.ಸಿ.ತಮ್ಮಣ್ಣ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.




