ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿ ಮಟ್ಟದ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಚಿಕಿತ್ಸಾ ಶಿಬಿರಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.
ತಾಲೂಕಿನ ವ್ಯಾಪ್ತಿಯಲ್ಲಿ ಏತ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಹೋಬಳಿ ಮಟ್ಟದಲ್ಲಿ ಕಣ್ಣಿನ ತಪಾಸಣೆ ಮಾಡುವ ಮೂಲಕ ಅಗತ್ಯವಿರುವವರಿಗೆ ಉಚಿತ ಕನ್ನಡಕ ನೀಡಲಾಗುತ್ತಿದೆ.
ಶೀಳನೆರೆ ಮತ್ತು ಬೂಕನಕೆರೆ ಏತ ನೀರಾವರಿ ಯೋಜನೆಗೆ 265 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಜುಲೈ 21 ರಂದು ಕೆ.ಆರ್. ಪೇಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೇರಿದಂತೆ ಹಲವು ಮಂತ್ರಿಗಳು ಆಗಮಿಸುತ್ತಾರೆ.
ಆ ದಿನ ಸುಮಾರು 1700 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಚಿವ ಡಾ.ನಾರಾಯಣಗೌಡ ಅವರು ಆದೇಶಪತ್ರ ನೀಡಿದರು. ಈ ಸಂದರ್ಭದಲ್ಲಿ ಶೀಳನೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆ್ಯಂಬುಲೆನ್ಸ್ ಹಸ್ತಾಂತರಿಸಿದರು.