ವಿಕಲಚೇತನರು ಹಲವಾರು ಬೇಡಿಕೆ ಸಲ್ಲಿಸಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲ ಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ವಿಕಲ ಚೇತನರ ಸಂಯುಕ್ರಶ್ರಯದಲ್ಲಿ ಕಲಾಮಂದಿರದಲ್ಲಿಂದು ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಿ.4 ರಿಂದ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ವಿಕಲಚೇತರನರಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಕ್ರಮ ಕುರಿತು ಪೂರಕವಾದ ಉತ್ತರ ನೀಡಿ, ಹೆಚ್ಚಿನ ಸೌಲಭ್ಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ವಿಕಲಚೇತರನ ಸಂಘದ ಸಹಕಾರದೊಂದಿಗೆ
ಜಿಲ್ಲಾ ಮಟ್ಟದ ಸಭೆ ನಡೆಸಿ ವಿಕಲಚೇತನ ಸೌಲಭ್ಯಗಳ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಸಂಸದನಾಗಿದ್ದಾಗ, ವಿಕಲ ಚೇತನರಿಗೆ ಹೆಚ್ಚಿನ ಸೌಲಭ್ಯ ನೀಡಿದ್ದೇನೆ ಎಂದು ಹೇಳಿದರು.
ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪ್ರತಿಭಾ ಪ್ರೋತ್ಸಾಹಧನ, ಆಧಾರ ಯೋಜನೆಯಡಿ ಸಾಲ ಸೌಲಭ್ಯ, ಶುಲ್ಕಮರುಪಾವತಿ, ಶಿಶುಪಾಲನಾ ಭತ್ಯೆ, ಕ್ರೀಡಾ ಪಟುಗಳಿಗೆ ಸಾಧನೆ ಯೋಜನೆಯಡಿ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ವಿಕಲಚೇತನ ಫಲಾನುಭವಿಗಳ ಖಾತೆಗಳಿಗೆ ಪಾವತಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಸಿಇಒ ಶೇಖ್ ತನ್ವೀರ್ ಆಸಿಫ್, ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರೋಹಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಓಂಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.




