ರೈತರ ಕುಂದು ಕೊರತೆಯನ್ನು ಚರ್ಚಿಸಿ ಕ್ಷಿಪ್ರಗತಿಯಲ್ಲಿ ಪರಿಹಾರ ನೀಡುವಂತೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್ ಅಶ್ವತಿ ಅವರು ಸೂಚನೆ ನೀಡಿದರು.
ಕೆ.ಆರ್.ಪೇಟೆಯ ತಾಲ್ಲೂಕು ಕಚೇರಿಯಲ್ಲಿ ರೈತ ಮುಖಂಡರ ಕುಂದು ಕೊರತೆ ಚರ್ಚೆಯ ಬಗ್ಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ರೈತರು ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಲೆಕ್ಕಿಗರು ಪ್ರತಿದಿನ ಹಾಜರಿದ್ದು, ರೈತರ ಕೆಲಸಗಳನ್ನು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದಾಗ ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ರೂಪ ಅವರಿಗೆ ತಿಳಿಸಿದರು.
ಸರ್ಕಾರಿ ಗೋಮಾಳದಲ್ಲಿ ಮಂಜೂರಾಗಿರುವ ರೈತರ ಜಮೀನುಗಳ ದುರಸ್ತಿ, ಸಾಗುವಳಿ ಚೀಟಿ ವಿತರಣೆ, ಖಾತೆಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.
ರೈತರ ಕೆಲಸಗಳ ಬಗ್ಗೆ ಸರ್ಕಾರಿ ಕಚೇರಿಗಳಲ್ಲಿ ಅನಗತ್ಯ ವಿಳಂಬ ಮಾಡುವುದು, ಲೋಪ ಎಸಗುವುದು ಜಿಲ್ಲಾಡಳಿತದ ಗಮನಕ್ಕೆ ಬಂದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ರೈತರ ಸಮಸ್ಯೆ ಕುರಿತಂತೆ ಕೆ.ಆರ್.ಪೇಟೆ ತಾಲ್ಲೂಕು ಆಡಳಿತದಲ್ಲಿ ಬಾಕಿ ಇರುವ ಅರ್ಜಿಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಇವುಗಳನ್ನು ವಿಲೇವಾರಿ ಮಾಡಿ ಒಂದು ವಾರದೊಳಗೆ ವರದಿ ನೀಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಪ್ರಭು ಅವರು ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಆಲಿಸಿ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.
ಹೇಮಾವತಿ ನಾಲಾ ವಿಭಾಗದಲ್ಲಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿಲ್ಲ ಎಂದು ರೈತರು ದೂರು ಸಲ್ಲಿಸಿದಾಗ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅಧೀಕ್ಷಕ ಅಭಿಯಂತರರು ತಿಳಿಸಿದರು.
ಸಭೆಯಲ್ಲಿ ,ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜವರೇಗೌಡ, ರೈತ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.