ಮೈಸೂರಿನ ಬನ್ನೂರು ಬಳಿಯ ಫಾರಂ ಹೌಸ್ ಒಂದರಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಸುತ್ತಿದ್ದ ತಂಡವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು, “ಬನ್ನೂರು ಹೈವೇ ಬಳಿಯ ಹುಣಗನಹಳ್ಳಿ ಫಾರಂ ಹೌಸ್ ನಲ್ಲಿ ಲಿಂಗ ಭ್ರೂಣ ಪತ್ತೆ ಕಾರ್ಯ ನಡೆಯುತ್ತಿರುವುದನ್ನ ಪತ್ತೆ ಹಚ್ಚಲಾಗಿದೆ. ರಹಸ್ಯ ಕಾರ್ಯಾಚರಣೆ ಮೂಲಕ ನಮ್ಮಆರೋಗ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭ್ರೂಣ ಹಂತಕರನ್ನು ಸೆರೆಹಿಡಿದಿದ್ದಾರೆ. ಗರ್ಭಿಣಿ ಮಹಿಳೆಯ ಸಹಾಯ ಪಡೆದು ಲಿಂಗ ಭ್ರೂಣ ಪತ್ತೆ ಕಾರ್ಯಚಟುವಟಿಕೆ ನಡೆಸುತ್ತಿರುವುದನ್ನು ಪತ್ತೆ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.
“ಕಾರ್ಯಾಚರಣೆ ವೇಳೆ ನಾಲ್ಕು ಗರ್ಭಿಣಿ ಸ್ತ್ರೀಯರು ಲಿಂಗ ಭ್ರೂಣ ಪತ್ತೆ ಮಾಡಿಸಿಕೊಳ್ಳಲು ಹಾಜರಿರುವುದು ಹಾಗೂ ಸ್ಕ್ಯಾನಿಂಗ್ ಬಳಕೆ ಮಾಡುವ ಉಪಕರಣವು ಕಂಡು ಬಂದಿದೆ. ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ (ಪಿ.ಸಿ.ಪಿ.ಎನ್.ಡಿ.ಟಿ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಆರೋಗ್ಯ ಇಲಾಖೆ ನಿರಂತರ ಹೋರಾಟ ನಡೆಸುತ್ತಿದೆ” ಎಂದು ಹೇಳಿದ್ದಾರೆ.
“ಹೆಣ್ಣು ಭ್ರೂಣ ಹತ್ಯೆ ಒಂದು ಸಮಾಜಿಕ ಪಿಡುಗು.. ಸಮಾಜ ಈ ಬಗ್ಗೆ ಜಾಗೃತರಾಗಿ ಭ್ರೂಣ ಹತ್ಯೆಯ ವಿರುದ್ಧ ಸಮರ ಸಾರಲು ಮುಂದಾಗಬೇಕು. ಆರೋಗ್ಯ ಇಲಾಖೆ ಸದಾ ಭ್ರೂಣ ಹಂತಕರ ವಿರುದ್ಧ ಸಹಕರಿಸುವವರ ಜೊತೆಯಿದೆ. ಯಾರು ಎಷ್ಟೇ ದೊಡ್ಡವರಿದ್ದರು, ಹೆಣ್ಣು ಭ್ರೂಣ ಹಂತಕರನ್ನು ಮಟ್ಟಹಾಕಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ” ಎಂದು ಅವರು ತಿಳಿಸಿದ್ದಾರೆ.
ಈ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ವರುಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.




