Sunday, May 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| 3 ಸ್ಕ್ಯಾನಿಂಗ್ ಸೆಂಟರ್ ಗಳ ವಿರುದ್ಧ ದೂರು ದಾಖಲು

ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ 1, ನಾಗಮಂಗಲ ತಾಲ್ಲೂಕಿನ 2 ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ವರು, ಜಿಲ್ಲೆಯಲ್ಲಿ 55 ಸ್ಕ್ಯಾನಿಂಗ್ ಸೆಂಟರ್, 25 ಹಾಸ್ಪಿಟಲ್‌, 32 ಲ್ಯಾಬ್, 130 ಕ್ಲಿನಿಕ್ ಗಳನ್ನು ಪರಿಶೀಲಿಸಿರುವ ಬಗ್ಗೆ ನಿಯೋಜಿಸಿರುವ ವೈದ್ಯರು, ಅಧಿಕಾರಿಗಳು ಇಲ್ಲಿ ಯಾವುದೇ ಹೆಣ್ಣು ಭ್ರೂಣ ಲಿಂಗ ಪತ್ತೆ ಅಥವಾ ಅನಧಿಕೃತ ಕೃತ್ಯ ನಡೆಯುತ್ತಿಲ್ಲ ಎಂಬ ದೃಢೀಕರಣ ಪತ್ರವನ್ನು ನೀಡಬೇಕು ಎಂದರು.

ಈಗಾಗಲೇ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಅರಿವು ಕಾರ್ಯಕ್ರಮ ಇನ್ನೂ ಚುರುಕುಗೊಳ್ಳಬೇಕು. ಜಾಗೃತಿ ಕಾರ್ಯಕ್ರಮದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳನ್ನು ಹೆಚ್ಚು ತೊಡಗಿಸಿಕೊಳ್ಳಿ ಎಂದರು.

ಗ್ರಾಮ ಮತ್ತು ವಾಡ್೯ ಸಭೆಗಳಲ್ಲಿ ಒಬ್ಬರೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಿ, ಸಭೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸಿ ಎಂದರು.

ಜನವರಿ ಮಾಹೆಯಿಂದ ಇಲ್ಲಿಯವರೆಗೆ 12 ವಾರಕ್ಕೂ ಮೇಲ್ಪಟ್ಟು ಗರ್ಭಪಾತವಾಗಿರುವ ಪ್ರಕರಣಗಳ ಮಾಹಿತಿ ಪಡೆದು ಅವುಗಳನ್ನು‌ ಪರಿಶೀಲಿಸಿ ಅದು ವೃದ್ಯಕೀಯ ಹಿನ್ನಲೆಯಲ್ಲಿ ವೈದ್ಯರ ಅಭಿಪ್ರಾಯದ ಮೇಲೆ ಆಗಿರುವ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಮಹಿಳಾ ಪರ ಹೋರಾಟಗಾರರಾದ ಸುನಂದ ಜಯರಾಂ, ಮುಖಂಡರಾದ ದೇವಿ, ಸಿ.ಕುಮಾರಿ, ವಿಮೋಚನ ಸಂಸ್ಥೆಯ ಮುಖ್ಯಸ್ಥ ಜನಾರ್ಧನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!