ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸ್ಥಳೀಯ ಅಗ್ನಿಶಾಮಕ ಅಧಿಕಾರಿಗಳಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ಅರಿವು ಹಾಗೂ ಅಣುಕು ಪ್ರದರ್ಶನ ಕಾರ್ಯಕ್ರಮ ಜರುಗಿತು.
ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಘಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಅಗ್ನಿಶಾಮಕ ಠಾಣಾಧಿಕಾರಿ ಅಂಬರೀಶ್ ಎನ್ ಮಾಹಿತಿ ನೀಡಿದರು.

ಏ.14ರಿಂದ ಏ.20 ರವರೆಗೆ,”ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ,”ಎಂಬ ಘೋಷ ವಾಕ್ಯದೊಂದಿಗೆ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ, ಅಮೂಲ್ಯವಾದ ಜೀವವನ್ನು, ಸಸ್ಯ ಸಂಪತ್ತನ್ನು ಬೆಂಕಿಯಿಂದ ರಕ್ಷಿಸಿ, ಅಗ್ನಿ ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ. ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಿ, ಅಗ್ನಿ ಅವಘಡಗಳ ಸಂದರ್ಭದಲ್ಲಿ ಅಗ್ನಿಶಾಮಕ ಇಲಾಖೆಯಿಂದ ಕೈಗೊಳ್ಳುವ ಕ್ರಮಗಳು ಹಾಗೂ ಇಲಾಖೆ ಬಳಸುವ ಉಪಕರಣಗಳ ಬಗ್ಗೆ ಮಾಹಿತಿ ನೀಡಿದರು.
ಆಗ್ನಿಶಾಮಕ ದಳದ ಸಿಬ್ಬಂದಿಗಳು ಅಣುಕು ಪ್ರದರ್ಶನ ಮೂಲಕ ಹಾಗೂ ಕರಪತ್ರ ವಿತರಿಸುವ ಮೂಲಕ ವೈದ್ಯರಿಗೆ ಹಾಗೂ ಅಧಿಕಾರಿ ಸಿಬ್ಬಂದಿಗಳಿಗೆ ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ ಮಾರುತಿ ಮಾತನಾಡಿ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಧಿಕಾರಿಗಳು ಆಕಸ್ಮಿಕ ಬೆಂಕಿ ಸಂಭವಿಸಿದ ಕಡೆ ಹಾಗೂ ತುರ್ತು ಸಂದರ್ಭಗಳಲ್ಲಿ ತಕ್ಷಣ ಧಾವಿಸಿ ತಮ್ಮ ಜೀವದ ಹಂಗು ತೊರೆದು ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿ ಕೊಳ್ಳುತ್ತಿರುವದು ಶ್ಲಾಘನೀಯ ಎಂದರು.
ಈ ವೇಳೆ ಆಸ್ಪತ್ರೆಯ ತಜ್ಞ ವೈದ್ಯರು, ಅಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ ಹಾಗೂ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳಾದ ವೆಂಕಟೇಶ್ ಟಿ, ಉದಯಕುಮಾರ, ನೂರಸಾಬ್ ಮಕ್ತುಮನವರ, ರಮೇಶ್ ಬಡಿಗೇರ ಹಾಗೂ ಆಸ್ಪತ್ರೆಯ ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.




