Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್: ದಳಪತಿಗಳಿಗೆ ಮಂಡ್ಯ ಸೇರಿದಂತೆ 4 ಕ್ಷೇತ್ರಗಳು ?

ಬಹಳ ದಿನಗಳ ಚರ್ಚೆಯ ನಂತರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಅಖೈರುಗೊಂಡಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಜೆಡಿಎಸ್‌ಗೆ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಬಿಜೆಪಿ ಮುಖಂಡ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಮೈತ್ರಿ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಬಿ ಎಸ್ ಯಡಿಯೂರಪ್ಪ, ‘ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೆಚ್ಚು ಶಕ್ತಿ ಬರಲಿದ್ದು, 25ರಿಂದ 26 ಸ್ಥಾನ ಗೆಲ್ಲಲು ಸಹಕಾರಿಯಾಗಲಿದೆ’ ಎಂದರು.

2024ರ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಇತ್ತೀಚೆಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದರು. ಅದರ ಬೆನ್ನಲ್ಲೇ ಮೈತ್ರಿ ಮಾತುಕತೆಯ ಬಗ್ಗೆ ಅಮಿತ್ ಶಾ ಒಪ್ಪಿದ್ದಾರೆ ಎಂದ ಯಡಿಯೂರಪ್ಪನವರು ಹೇಳಿದ್ದಾರೆ.

ದೇವೇಗೌಡರು ಹಾಸನ, ಮಂಡ್ಯ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಪಟ್ಟಿಯನ್ನು ಬಿಜೆಪಿಗೆ ಕೊಟ್ಟಿದ್ದು. ಇವುಗಳಲ್ಲೇ ನಾಲ್ಕು ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಆದರೆ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ಅಮಿತ್ ಶಾ ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. ಅದರ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನ ಗೆದ್ದಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದವು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!