Monday, November 23, 2026

ಪ್ರಾಯೋಗಿಕ ಆವೃತ್ತಿ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮಂಡ್ಯ ಜಿಲ್ಲೆಯ 7 ಗ್ರಾ. ಪಂ.ಗಳು ಆಯ್ಕೆ

ಸ್ಥಳೀಯ ಮಟ್ಟದಲ್ಲಿ ಸ್ವಯಂ ಆಡಳಿತವನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂಬ ಸದುದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡುವ ‘ಗಾಂಧಿ ಗ್ರಾಮ ಪುರಸ್ಕಾರ’ ಕ್ಕೆ ಮಂಡ್ಯ ಜಿಲ್ಲೆಯ 7 ತಾಲ್ಲೂಕುಗಳಲ್ಲಿ ತಲಾ ಒಂದರಂತೆ 7 ಗ್ರಾಮ ಪಂಚಾಯಿತಿಗಳು ಆಯ್ಕೆಯಾಗುವ ಮೂಲಕ ತಲಾ ರೂ. 5 ಲಕ್ಷಗಳ ಪ್ರೋತ್ಸಾಹ ಧನವನ್ನು ಪಡೆದುಕೊಂಡಿವೆ.

ಕೆ.ಆರ್.ಪೇಟೆ ತಾಲ್ಲೂಕಿನ ಸಾರಂಗಿ, ಮದ್ದೂರು ತಾಲ್ಲೂಕಿನ ಅಣ್ಣೂರು, ಮಳವಳ್ಳಿ ತಾಲ್ಲೂಕಿನ ನಿಢಘಟ್ಟ, ಮಂಡ್ಯ ತಾಲ್ಲೂಕಿನ ಮಂಗಲ, ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ, ಪಾಂಡವಪುರ ತಾಲ್ಲೂಕಿನ ಹಳೇಬಿಡು ಹಾಗೂ ಶ್ರೀರಂಗಪಟ್ಣಣದ ಕೊಡಿಯಾಲ ಗ್ರಾಮ ಪಂಚಾಯಿತಿಗಳು ಪುರಸ್ಕಾರಕ್ಕೆ ಆಯ್ಕೆಯಾಗಿವೆ.

2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡುವ ಸಂಬಂಧ 250 ಅಂಕಗಳ ಪ್ರಶ್ನಾವಳಿಗಳನ್ನು Google Form ತಂತ್ರಾಂಶದಿಂದ ಉತ್ತರಿಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಹಿಂದಿನ 2 ಸಾಲುಗಳಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಪಡೆದ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿ, 2021-22 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ, ಅತಿ ಹೆಚ್ಚು ಅಂಕ ಪಡೆದ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಸಲ್ಲಿಸುವಂತೆ ಕೋರಲಾಗಿತ್ತು.

ಅದರಂತೆ, ರಾಜ್ಯದ ಗ್ರಾಮ ಪಂಚಾಯತಿಗಳು ಅರ್ಜಿ ಸಲ್ಲಿಸಿದ್ದು, ಈ ಗ್ರಾಮ ಪಂಚಾಯತಿಗಳಲ್ಲಿ ಅತೀ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲ್ಲೂಕಿಗೆ ಮೂರು ಗ್ರಾಮ ಪಂಚಾಯತಿಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾಗಿತ್ತು. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ತಂಡವು ಮಾರ್ಗಸೂಚಿಗಳನುಸಾರ ಸ್ಥಳ, ದಾಖಲೆಗಳನ್ನು ಪರಿಶೀಲನೆ ಮಾಡಿ, ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ರಾಜ್ಯದ 233 ತಾಲೂಕಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿ ಶಿವಾರಸ್ಸು ಮಾಡಲಾಗಿದೆ.

ಪ್ರಸ್ತುತ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಶಿಫಾರಸ್ಸು ಮಾಡಲಾದ 233 ತಾಲೂಕಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 233 ಗ್ರಾಮ ಪಂಚಾಯತಿಗಳನ್ನು ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ 2021-22ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ