Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕಬ್ಬಿನ ದರ ನಿಗಧಿಗೆ ಒತ್ತಾಯಿಸಿ ರೈತ ಸಂಘದಿಂದ ಸಚಿವ ಪ್ರಹ್ಲಾದ್ ಜೋಷಿಗೆ ಮನವಿ

ವರದಿ : ಪ್ರಭು ವಿ.ಎಸ್.

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡಿ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮವಹಿಸಬೇಕೆಂದು ರೈತ ಸಂಘಟನೆ ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಲೂಕು ಬಿಜೆಪಿ ಕಚೇರಿಯಲ್ಲಿ ರೈತ ಸಂಘಟನೆ ಕಾರ್ಯಕರ್ತರು ಸಚಿವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಮನವಿ ಪತ್ರ ಸಲ್ಲಿಸಿದರಲ್ಲದೇ ಕಳೆದ ಹಲವಾರು ವರ್ಷಗಳಿಂದಲೂ ಕಬ್ಬಿನ ದರ ನಿಗಧಿ ಮಾಡದೆ ಕಬ್ಬು ಬೆಳೆಗಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿದ್ದು ಕಬ್ಬು ಸರಬರಾಜು ಮಾಡಿದ ರೈತರಿಗೆ ಕಾಲಮಿತಿಯೊಳಗೆ ಹಣ ಬಟಾವಡೆ ಮಾಡದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು ಪ್ರತಿ ವರ್ಷವು ಪ್ರತಿಭಟನೆಗಳ ಮೂಲಕವೇ ಹಣ ಪಡೆಯಬೇಕಾದ ಸ್ಥಿತಿ ಬಂದೊದಗಿರುವುದಾಗಿ ದೂರಿದರು.

ಕಬ್ಬಿಗೆ ಬೆಲೆ ನಿಗಧಿ ಮತ್ತು ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ನೂರು ದಿನಗಳ ಕಾಲ ರೈತರು ಹಾಗೂ ಕಬ್ಬು ಬೆಳೆಗಾರರು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದ್ದು, ರಸಗೊಬ್ಬರಗಳ ಬೆಲೆ ಏರಿಕೆಯಿಂದಾಗಿ ರೈತರು ಸಂಕಷ್ಟದಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದ್ದು, ಕೂಡಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವ ಮೂಲಕ ಕಬ್ಬು ಮತ್ತು ಇನ್ನಿತರೆ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗಧಿ ಮಾಡುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಬ್ಬಿನ ದರ ನಿಗಧಿ ಸಂಬಂಧ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರೊಟ್ಟಿಗೆ ಚರ್ಚಿಸಿ ಅಗತ್ಯ ಕ್ರಮವಹಿಸುವ ಭರವಸೆ ನೀಡಿದರಲ್ಲದೇ, ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

ಈ ವೇಳೆ ಬಿಜೆಪಿ ಮುಖಂಡ ಎಸ್.ಪಿ. ಸ್ವಾಮಿ, ಮುಖಂಡರಾದ ಪ್ರಕಾಶ್, ಮನುಕುಮಾರ್, ಮಹೇಂದ್ರ, ಸತೀಶ್, ಹನುಮಂತು, ಶಿವಲಿಂಗಯ್ಯ, ಶಂಕರೇಗೌಡ, ನಾಗೇಶ್, ಅಭಿಷೇಕ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ