Wednesday, September 18, 2024

ಪ್ರಾಯೋಗಿಕ ಆವೃತ್ತಿ

 ದೂರದೃಷ್ಟಿ ಯೋಜನೆಯಿಂದ ಸಮಗ್ರ ಅಭಿವೃದ್ಧಿ : ಗೋಪಾಲಯ್ಯ

ಗ್ರಾಮೀಣ ಪ್ರದೇಶದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಸಾಧಿಸಬೇಕಾಗಿರುವ ಗುರಿಗಳನ್ನು ನಿಗದಿಪಡಿಸಿ, ಅವುಗಳನ್ನು ಸಮುದಾಯದ ಭಾಗವಹಿಸುವಿಕೆಯೊಂದಿಗೆ ಕಾರ್ಯರೂಪಕ್ಕೆ ತರುವ ಕಾರ್ಯಕ್ರಮವೇ ದೂರದೃಷ್ಟಿ ಯೋಜನೆಯಾಗಿದ್ದು, ಇದರಿಂದ ಸಮಗ್ರ ಅಭಿವೃದ್ದಿ ಸಾಧ್ಯವಾಗಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿ ಯೋಜನೆ ಸಹಕಾರಿಯಾಗಲಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಭಾಗವಹಿಸುವಿಕೆ ಮುಖ್ಯ. ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕಾರ ಎಲ್ಲಾ ಗ್ರಾಮ ಪಂಚಾಯಿತಿಗಳು ಹೊಸದಾಗಿ ರಚನೆಯಾದ ಬಳಿಕ ಮುಂದಿನ 5 ವರ್ಷಗಳಿಗೆ ದೂರದೃಷ್ಟಿ ಯೋಜನೆಯನ್ನು ಸಿದ್ದಪಡಿಸಬೇಕಿದೆ. ಇದಕ್ಕಾಗಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಎಲ್ಲರೂ ತರಬೇತಿ ಪಡೆಯುವ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿ.ಪಂ.ಸಿಇಓ ಶಾಂತಾ ಎಲ್.ಹುಲ್ಮನಿ ಪ್ರಾಸ್ತಾವಿಕ ಮಾತನಾಡಿ, ಗ್ರಾಮೀಣ ಭಾಗದ ಸಮಸ್ಯೆಗಳನ್ನು ನಿವಾರಿಸುವ ಸಲುವಾಗಿ ದೂರದೃಷ್ಟಿ ಯೋಜನೆ ಜಾರಿಗೆ ಬಂದಿದೆ. ಈಗಾಗಲೇ ಜನಪ್ರತಿನಿಧಿಗಳು ಹಾಗೂ ಪಿಡಿಓಗಳಿಗೆ ತರಬೇತಿ ನೀಡಲಾಗಿದೆ. ಆರೋಗ್ಯ, ಶಿಕ್ಷಣ, ಬಡತನ, ಜೀವನೋಪಾಯ ನಿರ್ವಹಣೆ ಸೇರಿದಂತೆ 8 ವಲಯಗಳ 10 ಹಂತಗಳಲ್ಲಿ ಗ್ರಾಮಗಳ ಸಮಸ್ಯೆ ಗುರುತಿಸಿ ಸಮಸ್ಯೆಗಳ ಆಧಾರದ ಮೇಲೆ ಗುರಿ ನಿಗದಿಪಡಿಸಿಕೊಂಡು, ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಮೂಲಕ ಕಾರ್ಯರೂಪಕ್ಕೆ ತರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲ ಕೃಷ್ಣ, ಜಿ.ಪಂ. ಉಪ ಕಾರ್ಯದರ್ಶಿ (ಆಡಳಿತ) ಸರಸ್ವತಿ, ಯೋಜನಾ, ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಪವನ್ ಕುಮಾರ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!