ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 29 ರಂದು ಭಾನುವಾರ ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ಗ್ರೂಪ್ ’ಬಿ’ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜರುಗಲಿದ್ದು, ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೆ ನಿಷ್ಪಕ್ಷಪಾತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ ಬಿ.ಸಿ.ಶಿವಾನಂದ ಮೂರ್ತಿ ಸೂಚಿಸಿದರು.
ಗೆಜೆಟೆಡ್ ಪ್ರೊಬೇಷನರ್ ಗೂಪ್ ‘ಎ’ ಮತ್ತು ಗ್ರೂಪ್ ’ಬಿ’ ವೃಂದದ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಬಗ್ಗೆ ಇಂದು ಸಭೆ ನಡೆಸಿ ಮಾತನಾಡಿದರು.
ಪರೀಕ್ಷೆ ನಡೆಸಲು ಮಂಡ್ಯ ಜಿಲ್ಲೆಯಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಒಟ್ಟು 6,971 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ, ಪರೀಕ್ಷೆಯು ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಪತ್ರಿಕೆ-1 ಮತ್ತು ಮದ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಗೌಪ್ಯತೆ ಯಲ್ಲಿ ಯಾವುದೇ ರಾಜಿಯಿಲ್ಲದಂತೆ ನ್ಯಾಯ ಸಮ್ಮತವಾಗಿ ನಿಷ್ಪಕ್ಷಪಾತವಾಗಿ ಪಾರದರ್ಶಕತೆಯಿಂದ ನಡೆಸಿ ಎಂದು ನಿರ್ದೇಶನ ನೀಡಿದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಅನಧೀಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು.
ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸುತ್ತಮುತ್ತಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶ ಹೊರಡಿಸಲಾಗುವುದು ಎಂದರು.
ಪರೀಕ್ಷೆಗೆ ತಡವಾಗಿ ಬಂದ ಅಭ್ಯರ್ಥಿಗಳನ್ನು ಪರೀಕ್ಷೆಗೆ ಕೂರಿಸುವಂತಿಲ್ಲ ಹಾಗೂ ಪರೀಕ್ಷೆ ನಡೆಯುವಾಗ ಅರ್ಧಕ್ಕೆ ಅಭ್ಯರ್ಥಿಗಳನ್ನು ಕೊಠಡಿಯಿಂದ ಹೊರಗೆ ಕಳುಹಿಸುವಂತಿಲ್ಲ ಎಂದು ತಿಳಿಸಿದರು.
ಪರೀಕ್ಷಾ ಪರಿವೀಕ್ಷಕರು ಎಚ್ಚರಿಕೆಯಿಂದ ಪ್ರಶ್ನೆಪತ್ರಿಕೆಯನ್ನು ನೋಡಿಕೊಳ್ಳಬೇಕು, ಪರೀಕ್ಷೆ ಪ್ರಾರಂಭವಾಗುವುದಕ್ಕು ಒಂದು ಗಂಟೆ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಕ್ರಮವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು, ಪ್ರಶ್ನೆ ಪತ್ರಿಕೆಯ ಕವರ್ ತೆರೆದಿರುವುದಿಲ್ಲ ಎಂದು ಖಾತ್ರಿಪಡಿಸಿಕೊಳ್ಳಬೇಕು. ಪರೀಕ್ಷೆಯ ಸಂಪೂರ್ಣ ಜವಾಬ್ದಾರಿ ಪರೀಕ್ಷಾ ಮೇಲ್ವಿಚಾರಕರುಗಳ ಮೇಲೆ ಇದೆ ಎಂದು ತಿಳಿಸಿದರು.
ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ಮತ್ತು ಗೈರುಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಆನ್ಲೈನ್ ಮೂಲಕ ದಾಖಲಿಸುವಂತೆ ಪರೀಕ್ಷಾ ಕೇಂದ್ರಗಳ ಉಪಮುಖ್ಯ ಅಧೀಕ್ಷಕರುಗಳು/ ಪ್ರಾಂಶುಪಾಲರುಗಳಿಗೆ ಸೂಚಿಸಿದರು.
ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ಕುಲೇಟರ್, ಪೆನ್ ಡ್ರೈವ್ಗಳು, ಇಯರ್ ಫೋನ್ ಗಳು, ಮೈಕ್ರೋ ಫೋನ್ ಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿ ಒಳಗೆ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಅಭ್ಯರ್ಥಿಗಳು ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ಸಲುವಾಗಿ ಫುಲ್ ಶರ್ಟ್, ಶೂ, ಟೋಪಿ ಧರಿಸುವುದನ್ನು ಬಾಯಿ, ಕಿವಿ ಹಾಗೂ ತಲೆಮುಚ್ಚುವ ವಸ್ತ್ರವನ್ನು/ಸಾಧನವನ್ನು ಧರಿಸುವುದನ್ನು ನಿಷೇಧಿಸಿದ್ದು, ಯಾವುದೇ ರೀತಿಯ ಮಾಸ್ಕನ್ನು ಧರಿಸಿ ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಮಾಂಗಲ್ಯ ಸರ ಹಾಗೂ ಮೂಗುತಿಯನ್ನು ಹೊರತುಪಡಿಸಿ ಇನ್ನಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬರು ವೈದ್ಯರು/ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡುವುದು ಕೇಂದ್ರಗಳ ಸುತ್ತಮುತ್ತ ಸ್ವಚ್ಛತೆ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಹೇಳಿದರು.
ಚಲನವಲನ ವೈಕಲ್ಯವುಳ್ಳ ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ತೆರಳಲು ಅನುಕೂಲವಾಗುವಂತೆ ವೀಲ್ ಚೇರ್/ಇಳಿಜಾರು ಸೌಲಭ್ಯ ಒದಗಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪರೀಕ್ಷಾ ಉಪ ಕೇಂದ್ರದ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಿದರು.
ಸಭೆಯಲ್ಲಿ ಮಂಡ್ಯ ತಾಲೂಕು ತಹಸೀಲ್ದಾರ್ ಶಿವಕುಮಾರ್ ಬಿರಾದಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಕುಮಾರ್, ಬಿಇಓ ಮಹದೇವ ಸೇರಿದಂತೆ ವಿವಿಧ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.




