ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್ 10 ರಿಂದ 45 ದಿನಗಳ ಕಾಲ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಸಮೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂದರು.
ಸಮೀಕ್ಷೆ ಕೈಗೊಳ್ಳಲು 7 ತಾಲ್ಲೂಕಿಗೆ ಒಬ್ಬರಂತೆ ಸಮೀಕ್ಷೆದಾರರನ್ನು ನೇಮಕ ಮಾಡಲಾಗಿದೆ. ಅವರಿಗೆ ಈಗಾಗಲೇ ತರಬೇತಿ ಸಹ ನೀಡಲಾಗಿರುತ್ತದೆ. ಸಮೀಕ್ಷೆದಾರರು ತಾಲ್ಲೂಕು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಲಿಂಗತ್ವ ಅಲ್ಪಸಂಖ್ಯಾತರು ಆಸ್ಪತ್ರೆಗೆ ಭೇಟಿ ನೀಡಿ ನಿಖರ ಮಾಹಿತಿ ನೀಡಿ ಎಂದರು.
ಈ ಹಿಂದೆ ಜಿಲ್ಲೆಯಲ್ಲಿ ಅಶೋದಯ ಸಮಿತಿಯಿಂದ ನಡೆಸಿದ ಸಮೀಕ್ಷೆಯಲ್ಲಿ 1039 ಲಿಂಗತ್ವ ಅಲ್ಪಸಂಖ್ಯಾರನ್ನು ಗುರುತಿಸಲಾಗಿದೆ. ಇವರುಗಳು ಸಮೀಕ್ಷೆಯಲ್ಲಿ ನೊಂದಾಯಿಸಿಕೊಳ್ಳುವಂತೆ ನೋಡಿಕೊಳ್ಳಿ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಮುಖ್ಯಸ್ಥರನ್ನು ಸಂಪರ್ಕಿಸಿ ಸಮೀಕ್ಷೆಯ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ಹೊರ ಉಳಿಯದಂತೆ ನೋಡಿಕೊಳ್ಳಿ ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಲಿಂಗತ್ವ ಅಲ್ಪಸಂಖ್ಯಾತರು ವಸತಿ ಸಮಸ್ಯೆಯ ಬಗ್ಗೆ ತಿಳಿಸಿದಾಗ ಜಿಲ್ಲಾಧಿಕಾರಿಗಳು ಮಂಡ್ಯ ನಗರಸಭೆಯಲ್ಲಿ ನಿವೇಶನ ಹಾಗೂ ವಸತಿ ರಹಿತರ ಪಟ್ಟಿ ಸಿದ್ಧ ಪಡಿಸುತ್ತಿದ್ದು, ಮಂಡ್ಯ ನಗರ ವ್ಯಾಪ್ತಿಯಲ್ಲಿ ಬರುವ ಲಿಂಗತ್ವ ಅಲ್ಪಸಂಖ್ಯಾತರು ನಗರಸಭೆಯ ಪಟ್ಟಿಯಲ್ಲಿ ಹೆಸರು ಸೇರಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರಿಗೆ ಯೋಜನೆಗಳನ್ನು ರೂಪಿಸಲು, ಸವಲತ್ತುಗಳನ್ನು ಒದಗಿಸುವ ದೃಷ್ಟಿಯಿಂದ ಸಮೀಕ್ಷೆ ನಡೆಸುತ್ತದೆ. ಇದು ಸ್ವಯಂ ಪ್ರೇರಿತ ಸಮೀಕ್ಷೆಯಾಗಿರುತ್ತದೆ. ಲಿಂಗತ್ವ ಅಲ್ಪಸಂಖ್ಯಾತರು ಖುದ್ದು ತಾಲ್ಲೂಕು ಆಸ್ಪತ್ರೆಗೆ ಆಗಮಿಸಿ ಮಾಹಿತಿ ನೀಡಬೇಕಿರುತ್ತದೆ. ಇದರ ಬಗ್ಗೆ ಸಮುದಾಯದಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡು ಸಮೀಕ್ಷೆಯನ್ನು ನಡೆಸಿ ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಡಿ.ಎಲ್ ಒ ಡಾ: ಸೋಮಶೇಖರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ನಿರ್ಮಲ ಎಸ್. ಹೆಚ್, ಮಹಿಳಾ ಸಬಲೀಕರಣ ಘಟಕದ ಪುಷ್ಪ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.




