ಕಾಂಗ್ರೆಸ್ ಪಕ್ಷ ಶಿಕ್ಷಣ ಕ್ಷೇತ್ರಕ್ಕೆ ಹಲವಾರು ಕೊಡುಗೆಗಳನ್ನು ಕೊಟ್ಟಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ಕೊಟ್ಟು ಗೆಲ್ಲಿಸಬೇಕೆಂದು ಶಾಸಕ ಪಿ.ಎನ್ ನರೇಂದ್ರಸ್ವಾಮಿ ಕೋರಿದರು.

ಮಳವಳ್ಳಿ ತಾಲ್ಲೂಕಿನ ಬೂಗತಗಳ್ಳಿ ಸಮೀಪದ ಮದನ್ ಸಮುದಾಯ ಭವನದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ಭಾರಿ ಮೇಲ್ಮನೆ ಸದಸ್ಯರಾಗಿರುವ ಮರಿತಿಬ್ಬೇಗೌಡರು ಸದನದಲ್ಲಿ ಶಿಕ್ಷಕರು, ರೈತರು ಹಾಗೂ ಮಂಡ್ಯ ಜಿಲ್ಲೆಯ ಪರವಾಗಿ ಧ್ವನಿ ಎತ್ತಿ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗುವುದರ ಜೊತೆಗೆ ರೈತ ವಿರೋಧಿ ಕಾಯ್ದೆಯನ್ನು ಪರಿಷತ್‌ನಲ್ಲಿ ವಿರೋಧಿಸಿ ರೈತಪರವಾಗಿ ನಿಂತಿದ್ದಾರೆ, ಹೋರಾಟದ ಹಾದಿಯಲ್ಲಿ ಬಂದಿರುವ ಇವರನ್ನು ಐದನೇ ಭಾರಿ ಸದಸ್ಯರನ್ನಾಗಿ ಮಾಡುವ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಬಿಜೆಪಿ ಸರ್ಕಾರ ಮತ್ತು ಜೆಡಿಎಸ್ ಪಕ್ಷ ಓಪಿಎಸ್ ವಿಚಾರದಲ್ಲಿ ತಿರಸ್ಕಾರ ಮನೋಭಾವದಲ್ಲಿದ್ದರು. ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ರವರು, ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೇ ಓಪಿಎಸ್ ಸ್ಕೀಂ ಜಾರಿಗೆ ತರುತ್ತೇವೆಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಅದರಂತೆ ಓಪಿಎಸ್ ಸ್ಕೀಂ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಬದ್ದವಾಗಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಕತ್ತಲೆ ಬದುಕಿಗೆ ಕಾಂಗ್ರೆಸ್ ಪಕ್ಷ ಬೆಳಕು ಚೆಲ್ಲಲಿದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವುದಕ್ಕೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ನೇಮಕಾತಿ, ಶಿಕ್ಷಣದಲ್ಲಿ ಗುಣಮಟ್ಟ ಕಾಯ್ದುಕೊಳ್ಳುವುದು, ಇದರ ಜೊತೆಗೆ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಕಡೆಗಣಿಸಿರುವುದನ್ನು ಸರಿ ಮಾಡಲು ಕಾಂಗ್ರೆಸ್ ಸರ್ಕಾರ ಪಟ್ಟಣ ಹಾಗೂ ಗ್ರಾಮೀಣ ಸರ್ಕಾರಿ ಶಾಲೆಗಳನ್ನು ಸಿಎಸ್‌ಆರ್ ಫಂಡ್ ಮೂಲಕ ಅಭಿವೃದ್ದಿಗೊಳಿಸಲಾಗುತ್ತಿದೆ, ಜೊತೆಗೆ ಪಬ್ಲಿಕ್ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ದಡದಪುರ ಶಿವಣ್ಣ, ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




