Saturday, November 21, 2026

ಪ್ರಾಯೋಗಿಕ ಆವೃತ್ತಿ

ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ; ಪ್ರಸ್ತಾವನೆ ಸಲ್ಲಿಸಲು ಸಿಎಂ ಸೂಚನೆ

ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರ ಮನವಿ ಮೇಲೆ ಈ ಆದೇಶ ನೀಡಲಾಗಿದೆ.

ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ .

ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆಯಾಗಿದ್ದಾಳೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿಯಾಗಿದ್ದಾಳೆ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿಯಾಗಿ ಬೇಡಿಕೆ ಸಲ್ಲಿಸಿ, ಕೆಲವು ಸಲಹೆ ನೀಡಿದ್ದೆ. ಚಿನ್ನದ ರಥ ನಿರ್ಮಿಸುವ ವೆಚ್ಚವನ್ನು ಸರ್ಕಾರಪಾಲು .ಮತ್ತು ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ನೀಡಿದ್ದೆ. ಅದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದೇಶ ನೀಡಿರುವುದು ಸಂತಸ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಮನವಿಯಲ್ಲೇನಿತ್ತು ..?

ಪುರಾಣದ ‘ದೇವಿ ಮಹಾತ್ಮೆ’ಯಲ್ಲಿ ತಾಯಿ ಚಾಮುಂಡಿಯ ಪ್ರಸ್ತಾಪವಿದೆ. ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ’ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟವೆಂಬ ಹೆಸರು ಬಂದಿದೆ. ಸ್ಕಂದ ಪುರಾಣದಲ್ಲಿ ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರ ಉಲ್ಲೇಖಿತವಾಗಿದೆ. ಅವುಗಳಲ್ಲಿ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವೂ ಒಂದಾಗಿದೆ. ಚಾಮುಂಡಿಬೆಟ್ಟದಲ್ಲಿರುವ ಶ್ರೀ ಮಹಾಬಲೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾದುದು. ಹಿಂದೆ ಬೆಟ್ಟವನ್ನು ಮಹಾಬಲಾದ್ರಿ ಎಂದೂ ಸಹ ಕರೆಯಲಾಗುತ್ತಿತ್ತು. ಮುಖ್ಯ ದೇಗುಲದ ಗರ್ಭಗುಡಿಯಲ್ಲಿ ಮಹಿಷಮರ್ಧಿನಿಯಾದ ಚಾಮುಂಡೇಶ್ವರಿಯ ವಿಗ್ರಹವು ವಿರಾಜಮಾನವಾಗಿದೆ. ಎಂಟು ಭುಜಗಳನ್ನು ಹೊಂದಿರುವ ಚಾಮುಂಡೇಶ್ವರಿ ಇಲ್ಲಿ ಆಸೀನಳಾಗಿದ್ದಾಳೆ. ಈ ವಿಗ್ರಹವು ಬಹಳಷ್ಟು ಪುರಾತನವಾದದ್ದು. ಈ ಶಿಲಾಮೂರ್ತಿಯನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಸ್ಥಳ ಪುರಾಣ ಹೇಳುತ್ತದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ