ಸರ್ಕಾರದ ಸೌಲಭ್ಯಗಳು ಸಾರ್ವಜನಿಕರಿಗೆ ಸರಿಯಾಗಿ ತಲುಪುವ ರೀತಿ ಕಾರ್ಯನಿರ್ವಹಿಸಿ, ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್‌ನ ಆಡಳಿತ ಅಧಿಕಾರಿ ಡಾ.ವಿ.ರಾಮ್ ಪ್ರಸಾಥ್ ಮನೋಹರ್ ತಿಳಿಸಿದರು.
ಮಂಡ್ಯದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಅಧಿಕಾರಿಗಳು ಮಾಡುವ ಕೆಲಸ ತೃಪ್ತಿದಾಯಕವಾಗಿರಬೇಕು. ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಜನರಿಗೆ ತಲುಪದಿದ್ದರೆ ಯೋಜನೆಯ ಉದ್ದೇಶ ಈಡೇರುವುದಿಲ್ಲ. ಆದ್ದರಿಂದ ಸಕಾಲಕ್ಕೆ ಜನರಿಗೆ ಸೌಲಭ್ಯಗಳನ್ನು ತಲುಪಿಸಬೇಕು. ಈ ಹಿನ್ನಲೆಯಲ್ಲಿ ನಿಯಮಾನುಸಾರವಾಗಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳು ಕ್ಷಿಪ್ರಗತಿಯಲ್ಲಿ ಸಾಗಬೇಕು. ನಿಗದಿಪಡಿಸಿದ ಸಮಯಕ್ಕೆ ಪೂರ್ಣಗೊಳ್ಳಬೇಕು. ಸರ್ಕಾರದ ಅನುದಾನ ಸಮರ್ಪಕವಾಗಿ ಸದ್ಭಳಕೆಯಾಗಬೇಕು ಎಂದು ತಿಳಿಸಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ವಿವಿಧ ಇಲಾಖೆಗಳ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಕಾಮಗಾರಿಗಳು ನಿಗದಿಪಡಿಸಿರುವಂತೆ ಪಾರದರ್ಶಕವಾಗಿ ಪೂರ್ಣಗೊಂಡಿರಬೇಕು ಹಾಗೂ ಗುಣಮಟ್ಟದಿಂದ ಕೂಡಿರಬೇಕು. ಈ ಕುರಿತಂತೆ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲನೆ ನಡೆಸಿ ವರದಿ ನೀಡಬೇಕು. ವರದಿಯ ಆಧಾರದ ಮೇಲೆ ತಾವು ಖುದ್ದು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸುತ್ತೇನೆ. ಲೋಪ ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾಮಗಾರಿಯನ್ನು ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಒಪ್ಪಂದ ಮಾಡಿಕೊಳ್ಳಲಾಗಿರುತ್ತದೆ. ಒಪ್ಪಂದಲ್ಲಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸದಿದ್ದರೆ ದಂಡ ವಿಧಿಸುವ ಬಗ್ಗೆ ಉಲ್ಲೇಖವಿದ್ದರೆ,ಒಪ್ಪಂದ ದಂತೆ ಕ್ರಮ ಕೈಗೊಳ್ಳಿ ಎಂದರು.
ಪಿಎಂಜಿಎಸ್ ವೈ ಹಂತದಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಕುರಿತು ಚರ್ಚಿಸಿ 30 ನೂತನ ಕಾಮಗಾರಿಯಲ್ಲಿ 11 ಪೂರ್ಣಗೊಂಡು 21 ಕಾಮಗಾರಿಗಳು ಪ್ರಗತಿಯಲ್ಲಿವೆ. ಮಾಹಿತಿ ಪಡೆದು ಬಾಕಿ ಉಳಿದ ಕೆಲಸವನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಬಾಕಿ ಉಳಿದಿರುವ ಕಾಮಗಾರಿಗೆ ಟೆಂಡರ್ ಕರೆದು ಸಂಬಂಧಪಟ್ಟವರ ಜೊತೆ ಪರಿಶೀಲಿಸಿ, ಸಕಾಲದಲ್ಲಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಗಮನಹರಿಸಲು ಸೂಚಿಸಿದರು.
ಜೂನ್ ಅಂತ್ಯದೊಳಗಾಗಿ ಉಳಿದಿರುವ ಎಲ್ಲಾ ಇಲಾಖೆಯ ಕಾಮಗಾರಿಗಳನ್ನು ಪೂರ್ಣ ಗೊಳಿಸಿ. ಪರಿಶೀಲನೆಗಾಗಿ ವಿಶೇಷ ತಂಡಗಳನ್ನು ರಚಿಸಿ ಕಳುಹಿಸಲಾಗುವುದು ಎಂದರು.
ಸರ್ಕಾರ ನೀಡುವ ಅನುದಾನವನ್ನು ಸರಿಯಾಗಿ ಬಳಕೆ ಮಾಡುವಂತಹ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಬಹಳ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಿ ಯಾವುದೇ ಲೋಪಕ್ಕೆ ಆಸ್ಪದ ನೀಡಬೇಡಿ ಎಂದರು.
2022-23ನೇ ಸಾಲಿನ ಇಲಾಖೆಯ ಕಾಮಗಾರಿಗಳು ಯಾವುದೇ ಕುಂದು ಕೊರತೆಯಾಗದ ರೀತಿ ಅಧಿಕಾರಿಗಳು ಕ್ರಮ ವಹಿಸಬೇಕು. ಕಾಮಗಾರಿಯ ಕಾರ್ಯ ಕ್ರಮಗಳು ಸಮರ್ಪಕವಾಗಿ ಕ್ರಿಯಾಯೋಜನೆ ಆಗಲು ಸಹಕರಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.