ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಸೇರಿದಂತೆ ಹಲವು ಅಪರಾಧ ಕೃತ್ಯಗಳೂ ನಡೆಯುತ್ತಿದ್ದರೂ ರಾಜ್ಯ ಸರ್ಕಾರ, ಗೃಹಮಂತ್ರಿಗಳು, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ಮೌನ ವಹಿಸಿರುವುದೇಕೆ ? ಎಂದು ರೈತಪರ ಹೋರಾಟಗಾರ ಹೆಚ್.ಎಸ್.ಚಂದ್ರಶೇಖರ್ ಪ್ರಶ್ನಿಸಿದರು.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೌಜನ್ಯ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ವಿವರಣೆ ನೀಡಿ, ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ 13 ವರ್ಷಗಳಿಂದ ಹೋರಾಟಗಳು ನಡೆಯುತ್ತಿದ್ದು, ಈ ಸಂಬಂಧ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ ಎಂದರು.
ಸೌಜನ್ಯ ಕುಟುಂಬಕ್ಕೆ ಆದ ಅನ್ಯಾಯ ಇನ್ನಾವ ಹೆಣ್ಣು ಮಕ್ಕಳ ಕುಟುಂಬಕ್ಕೂ ಆಗಬಾರದು. ಇಂತಹ ಹೀನಾಯ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸುತ್ತದೆ. ವೀರೇಂದ್ರ ಹೆಗ್ಗಡೆಯವರಿಗೆ ಯಾವ ಒತ್ತಡವಿದೆಯೋ ತಿಳಿಯದು. ಅವರ ಮೂಲಕ ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಪ್ರಕರಣದ ತನಿಖೆ ನಡೆಸಿ ಸೌಜನ್ಯ ಕುಟುಂಬಕ್ಕೆ ಸರ್ಕಾರ ನ್ಯಾಯ ಕೊಡಿಸದಿದ್ದರೆ, ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ.ಕೆ.ಸಂಜಯ್ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ರಮೇಶ್ ಇತರರಿದ್ದರು.




