Wednesday, November 18, 2026

ಪ್ರಾಯೋಗಿಕ ಆವೃತ್ತಿ

ಕಾಂಗ್ರೆಸ್ ಜನಪರ ಗ್ಯಾರಂಟಿ ಯೋಜನೆಗಳು ಬಿಜೆಪಿ- ಜಾ.ದಳದ ನಿದ್ದೆಗೆಡಿಸಿವೆ – ಸಚಿವ ಚಲುವರಾಯಸ್ವಾಮಿ

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರವಾದ ಗ್ಯಾರಂಟಿ ಯೋಜನೆಗಳಿಂದ ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಕ್ಷರಶಃ ಕಂಗಾಲಾಗಿದ್ದಾರೆ. ಮೋದಿ ನಮಗೆ ಅಕ್ಕಿ ಕೊಡದಿದ್ದರೂ ನಾವು ಹೇಳಿದಂತೆಯೇ ಜನರ ಖಾತೆ ಹಣ ಹಾಕಿ ನೀಡಿದ್ದ ಭರವಸೆಯನ್ನು ಉಳಿಸಿಕೊಂಡೆವು, ಇದು ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಜೆಡಿಎಸ್ ನ ನಿದ್ದೆಗೆಡಿಸಿದೆ, ಇದರಿಂದಾಗಿ ಅವರು ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಎನ್. ಚಲುವರಾಯಸ್ವಾಮಿ ಹೇಳಿದರು.

ಮಂಡ್ಯನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಶನಿವಾರ ಏರ್ಪಡಿಸಿದ್ದ `ಗೃಹಜ್ಯೋತಿ’ ಯೋಜನೆಯಡಿ ಗ್ರಾಹಕರಿಗೆ ಶೂನ್ಯ ಬಿಲ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

`ಅನ್ನಭಾಗ್ಯ’ಕ್ಕೆ 33 ರೂ. ನೀಡುತ್ತೇವೆ, ಅಕ್ಕಿ ಕೊಡಿ ಎಂದರೂ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಮಾಡಿ ಬಡವರ ಜತೆ ಚೆಲ್ಲಾಟವಾಡಿದರು. ಇವರು ಅಕ್ಕಿ ಕೊಡಲಿಲ್ಲ ಎಂದು ಅಕ್ಕಿ ಬದಲಿಗೆ ಹಣ ನೀಡಿದೋ. ಇದರಿಂದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆಕೆಟ್ಟು ಹೋಗಿದೆ ನುಡಿದರು.

ಬಿಜೆಪಿ-ಜೆಡಿಎಸ್ ಹಗಲುಗನಸು

ಇನ್ನು ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ್ದೇ ಆಡಳಿತ. ಕಾಂಗ್ರೆಸ್ ಪಕ್ಷವನ್ನು ಕಿತ್ತು ಹಾಕಬೇಕೆಂದು ಹಗಲು-ರಾತ್ರಿ ಕನಸು ಕಾಣುತ್ತಿರುವ ಬಿಜೆಪಿ-ಜಾ.ದಳಕ್ಕೆ ಅದು ಸಾಧ್ಯವಿಲ್ಲ ಎಂದ ಅವರು, ಕಾಂಗ್ರೆಸ್ ಪಕ್ಷದ ಗುರಿ ಅಭಿವೃದ್ಧಿ ಒಂದೇ. ಎಲ್ಲ ವರ್ಗದ ಜನರ ಪರ ನಿಲ್ಲುತ್ತೇವೆ. ಗ್ರಾಮ, ತಾಲ್ಲೂಕು, ಜಿಲ್ಲೆಗಳನ್ನು ಅಭಿವೃದ್ಧಿ ಮಾಡಿಯೇ ತೀರುತ್ತೇವೆ. ವ್ಯಕ್ತಿ ಅಲ್ಲ, ಕಾಂಗ್ರೆಸ್ ಪಕ್ಷ ಎಂದು ಮತ ಹಾಕಬೇಕು. ಆ ರೀತಿ ಯೋಜನೆ ರೂಪಿಸುತ್ತೇವೆ ಎಂದರು ಹೇಳಿದರು.

ನಿದ್ದೆ ಮಾಡುತ್ತಿಲ್ಲ

ಬಿಜೆಪಿ ಹಾಗೂ ಜಾ.ದಳದ ನಾಯಕರು ಕಳೆದ ಎರಡೂವರೆ ತಿಂಗಳಿನಿಂದ ನೆಮ್ಮದಿಯಾಗಿ ನಿದ್ದೆ ಮಾಡುತ್ತಿಲ್ಲ, ಊಟ ಮಾಡುತ್ತಿಲ್ಲ. ನಾವು ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ, ಜನರಿಗೆ ಕೊಟ್ಟ ಮಾತನ್ನು ತಪ್ಪಿದ್ದೇವೆ. ಇನ್ನು ಇವರು 5 ಗ್ಯಾರಂಟಿ ಯೋಜನೆಗಳನ್ನು ಮಾಡುವುದಿಲ್ಲ, ಇವರ ವಿರುದ್ಧ ಪ್ರತಿದಿನ ವಾಗ್ದಾಳಿ ನಡೆಸಬಹುದು ಎಂದು ಕೊಂಡಿದ್ದರು. ಆದರೆ, ಅದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಯಾವುದೇ ವಿಚಾರಗಳನ್ನು ತೆಗೆದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜಾ.ದಳ ನಾಯಕರ ವಿರುದ್ಧ ಗುಡುಗಿದರು.

ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದರೆ ಕರ್ನಾಟಕ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದಲೂ ಬಿಜೆಪಿ ನಾಯಕರು ಸುಳ್ಳು ಹೇಳಿಕೆಗಳನ್ನು ಹೇಳಿಸಿದರು. ಕರ್ನಾಟಕದಲ್ಲಿರುವುದು ಕಾಂಗ್ರೆಸ್ ಸರ್ಕಾರ ಎಂದು ಪ್ರಧಾನಿಗಳು ಯೋಚನೆ ಮಾಡಬೇಕಾಗಿತ್ತು. ಆದರೆ, ಯೋಚನೆ ಮಾಡದೆ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದಾರೆ ಎಂದು ತಿರುಗೇಟು ನೀಡಿದರು.

ಯುವನಿಧಿ ಡಿಸೆಂಬರ್ ನಲ್ಲಿ ಜಾರಿ

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಕ್ಯಾಬಿನೆಟ್ ಸಭೆಯಲ್ಲೇ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದರು. ಇದಕ್ಕಾಗಿ 35 ಸಾವಿರ ಕೋಟಿ ಒದಗಿಸುವ ಮೂಲಕ ಒಂದೊಂದು ಯೋಜನೆಗಳನ್ನು ಜಾರಿಗೆ ತಂದರು. `ಯುವನಿಧಿ’ ಯೋಜನೆಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಜನತೆಗೆ ಹೇಳಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಪ್ರಪಂಚದಲ್ಲಿ ಜಾರಿಗೆ ತಂದಿರುವ ಸರ್ಕಾರ ಎಂದರೆ ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಒಂದೇ. ಇದನ್ನು ಸಹಿಸದ ವಿಪಕ್ಷದ ನಾಯಕರು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಶಾಸಕ ಪಿ.ರವಿಕುಮಾರ್ ಗಣಿಗ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕ  ಪಿ.ಎಂ.ನರೇಂದ್ರಸ್ವಾಮಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್, ಬಿ.ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡ ಬಿ.ಎಲ್.ದೇವರಾಜು, ಕುರುಬರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ