Thursday, September 19, 2024

ಪ್ರಾಯೋಗಿಕ ಆವೃತ್ತಿ

ಒಂದು ವರ್ಷ ಪೂರೈಸಿದ ರಾಜ್ಯ ಸರ್ಕಾರ| ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಗಾಗಿ 52,009 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದೇವೆ. ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂಬುವುದು ಬಿಜೆಪಿಯ ಅಪ್ಪಟ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಸಿಎಂ, “ನಮ್ಮ ಸರ್ಕಾರ ಬಂದು ಇಂದಿಗೆ ಒಂದು ವರ್ಷ ತುಂಬಿದೆ. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸಂಭ್ರಮಾಚರಣೆ ನಡೆಸಲು ಆಗಿಲ್ಲ. ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು” ಎಂದರು.

“ಅಭದ್ರತೆಯ ಆತಂಕ ಇರಲೇಬಾರದೆಂದು ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಸ್ಪಷ್ಟವಾದ ಬಹುಮತವನ್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಟ್ಟಿದ್ದೀರಿ. ರಾಜ್ಯದ ಮತದಾರರ ಪ್ರಜ್ಞಾವಂತಿಕೆ, ಅವರ ವಿಶ್ವಾಸವನ್ನು ನಾವು ಕಳೆದುಕೊಳ್ಳುವುದಿಲ್ಲ” ಎಂದು ತಿಳಿಸಿದರು.

“ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆಗೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ. ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ” ಎಂದು ಸಿಎಂ ಹೇಳಿದರು.

“ಅನ್ನಭಾಗ್ಯ ಯೋಜನೆಗೆ ನಾವು ಹಣ ಕೊಟ್ಟರೂ, ಅಕ್ಕಿ ಕೊಡದೆ ಕೇಂದ್ರ ಸರ್ಕಾರ ಸತಾಯಿಸಿತು. ಅಕ್ಕಿ ಸಂಗ್ರಹ ಇದ್ದರೂ ಕೊಡಲಿಲ್ಲ. ಅಕ್ಕಿ ಕೊಡದೆ ಇರಲು ಮೇಲಿನಿಂದ ಆದೇಶ ಇದೆ ಎಂದು ಅಧಿಕಾರಿಗಳು ತಿಳಿಸಿದರು. ನಾವು ಮಧ್ಯವರ್ತಿಗಳ ಹಾವಳಿ ಇಲ್ಲದಂತೆ ನೇರ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡಿದ್ದೇವೆ” ಎಂದು ತಿಳಿಸಿದರು.

“ಶಕ್ತಿ ಯೋಜನೆಯಲ್ಲಿ ಏಪ್ರಿಲ್‌ ಕೊನೆಯವರೆಗೂ 201 ಕೋಟಿ ಮಹಿಳೆಯರು ಉಚಿತವಾಗಿ ಬಸ್‌ನಲ್ಲಿ ಸಂಚರಿಸಿದ್ದಾರೆ. ಯಾವ ಕಾರಣಕ್ಕೂ ನಾವು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ನಮ್ಮ ಯೋಜನೆಗಳು ಬಡ ಜನರಿಗೆ ಆರ್ಥಿಕವಾಗಿ ಸಹಾಯ ಮಾಡಿವೆ” ಎಂದರು.

“ಅಭಿವೃದ್ಧಿಗೆ ಹಿಂದಿನ ಸರ್ಕಾರಕ್ಕಿಂತ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ಹೆಚ್ವು ಹಣ ಖರ್ಚು ಮಾಡಿದ್ದೇವೆ. ಬೊಮ್ಮಾಯಿ ಬಜೆಟ್ ಗಾತ್ರಕ್ಕಿಂತ ನಮ್ಮ ಸರ್ಕಾರದ ಬಜೆಟ್ ಗಾತ್ರ ಹೆಚ್ಚಾಗಿದೆ. ನಮ್ಮ ಸರ್ಕಾರ ಪಾಪರ್ ಆಗಿದ್ದರೆ ಇದು ಸಾಧ್ಯವಿತ್ತಾ?” ಎಂದು ಪ್ರಶ್ನಿಸಿದರು. ನುಡಿದಂತೆ ನಡೆದು 7.5 ಕೋಟಿ ಜನರ ಆಶಯ ಈಡೇರಿಸಿದ್ದೇವೆ. ನಮಗೆ ಆಶೀರ್ವಾದ ಮಾಡಿ ಬಹುಮತದಿಂದ ಗೆಲ್ಲಿಸಿದ ಜನತೆಗೆ ಮಾಧ್ಯಮಗಳ ಮೂಲಕ ಅಭಿನಂದನೆ ಸಲ್ಲಿಸುವೆ” ಎಂದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!