Thursday, September 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರದ ವಿರುದ್ದ ಆಕ್ರೋಶ: ಕಡ್ಲೆಕಾಯಿ ಮಾರಾಟ ಮಾಡಿದ ಅತಿಥಿ ಉಪನ್ಯಾಸಕರು !

ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ 14 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸಿರುವುದರ ವಿರುದ್ದ ಮಂಡ್ಯನಗರದಲ್ಲಿ ಅತಿಥಿ ಉಪನ್ಯಾಸಕರು ಸೋಮವಾರ ಕಡ್ಲೆಕಾಯಿ ಮಾರಾಟ ಮಾಡಿ ವಿನೂತನ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು, 20 ವರ್ಷಗಳಿಂದ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದಾರೆ. ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಘೋಷಿಸಿತ್ತು, ಇದೀಗ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಭರವಸೆಯನ್ನು ಉಳಿಸಿಕೊಂಡು ನುಡಿದಂತೆ ನಡೆಯಬೇಕೆಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ಜಿ ವಿ ರಮೇಶ್ ಮಾತನಾಡಿ, ರಾಜ್ಯದ ಎಲ್ಲೆಡೆ ಕಳೆದ 14 ದಿನದಿಂದ ಅತಿಥಿ ಉಪನ್ಯಾಸಕರು ಹೋರಾಟ ಮಾಡುತ್ತಿದ್ದಾರೆ, ಆದರೂ ಸಹ ರಾಜ್ಯ ಸರ್ಕಾರ ಸೇವಾ ಭದ್ರತೆ ನೀಡಲು ಮೀನಾ ಮೇಷ ಎಣಿಸುತ್ತಿದೆ ಎಂದು ಹೇಳಿದರು.

ತರಗತಿ ಬಹಿಷ್ಕಾರ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ,ಡಿ. 22 ರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಲಿದೆ, ಆದರೆ ಇನ್ನೂ ಪಠ್ಯಕ್ರಮ ಬೋಧನೆ ಮುಗಿದಿಲ್ಲ, ವಿದ್ಯಾರ್ಥಿಗಳು ಹೇಗೆ ಪರೀಕ್ಷೆ ಬರೆಯಲಿದ್ದಾರೆ, ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಮೂಲಕ ಜನಪರ ಯೋಜನ ಜಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಅದೇ ರೀತಿ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭಾಗ್ಯ ಕಲ್ಪಿಸಲಿ, ಸಚಿವ ಸುಧಾಕರ್ ಮುತುವರ್ಜಿ ವಹಿಸಿ ಸೇವಾ ಭದ್ರತೆ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪರಮೇಶ್, ಉಪಾಧ್ಯಕ್ಷ ಡಾ.ಎಂ.ಎಸ್.ಚಲುವರಾಜು, ಸಂಘದ ಕಾರ್ಯದರ್ಶಿ ಡಾ.ಗಣೇಶ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!