Thursday, September 19, 2024

ಪ್ರಾಯೋಗಿಕ ಆವೃತ್ತಿ

”ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ” : ಹೆಚ್.ಡಿ.ಕುಮಾರಸ್ವಾಮಿ

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ‘ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ’. ಈಚೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ  ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

“>

ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ. ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ. ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ? ಎಂದು ಸರಣಿ ಟ್ವೀಟ್ ಗಳ ಮೂಲಕ ಅವರು ಖಂಡಿಸಿದ್ದಾರೆ. 

ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಸರಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ? ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ, ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಹೇಳಿದ್ದಾರೆ.

ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಸರಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ. ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು. ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ‘ ನಂದಿನಿ ಉಳಿಸಿ ‘ ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!