Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ : ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ಧಿಗೆ ನಯಾಪೈಸೆಯನ್ನೂ ಕೊಟ್ಟಿಲ್ಲ. ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಸಚಿವ ನಿರಾಣಿಗೆ ಕೊಟ್ಟಿದ್ದಾರೆ. ಅವರು ಇನ್ನೂ 28 ಕೋಟಿ ರೂ. ಪಾವತಿ ಮಾಡಿಲ್ಲ.  ಹೀಗಿದ್ದರೂ ಬಿಜೆಪಿ ನಾಯಕರು ಮತ ಕೇಳುತ್ತಿದ್ದಾರೆ. ಉಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ನಡೆದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೇಳಿ ಕೇಳಿ ಮಂಡ್ಯ ಜಿಲ್ಲೆ ಜಾ.ದಳದ ಭದ್ರಕೋಟೆ. ಎಂದಿಗೂ ಇಲ್ಲಿ ಬಿಜೆಪಿಗರಿಗೆ ಪ್ರವೇಶ ನೀಡಿರಲಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ತವರು ಜಿಲ್ಲೆಯಲ್ಲಿ 4 ಸ್ಥಾನಗಳನ್ನುನೀಡುವಂತೆ ಕೇಳುತ್ತಿದ್ದಾರೆ. ಯಾವ ನೈತಿಕತೆ ಇದೆ ಇವರಿಗೆ ಎಂದು ಪ್ರಶ್ನಿಸಿದರು.

ಈಗಾಗಲೇ ರೈತರ ಆತ್ಮಹತ್ಯೆ ಪ್ರಕರಣಗಳು ಪ್ರಾರಂಭವಾಗಿವೆ. ಆದರೆ, ಸರ್ಕಾರ ರೈತರ ಕಷ್ಟಗಳನ್ನು ಪರಿಹರಿಸಲು ಮುಂದಾಗಿಲ್ಲ. ಕಳೆದ ಬಾರಿ ಮಂಡ್ಯ ಜಿಲ್ಲೆಯೊಂದರಲ್ಲೇ 200ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹಾಯಕ್ಕೆ ಬರಲಿಲ್ಲ. ಆದರೆ, ಜಾ.ದಳದ ವತಿಯಿಂದ ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ ಎಂದರು.

ರೈತರ ಹೋರಾಟಕ್ಕೆ ಬೆಲೆ ಇಲ್ಲ 

ಕಬ್ಬು ಮತ್ತು ಹಾಲಿಗೆ ಬೆಂಬಲ ನೀಡುವಂತೆ ಕಳೆದ 44 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದರೆ ಪ್ರತಿಭಟನೆಗೆ ಅವಕಾಶ ನೀಡುತ್ತಿರಲಿಲ್ಲ. ಸಭೆ ಕರೆದು ಬಗೆಹರಿಸುತ್ತಿದ್ದೆ ಎಂದು ಹೇಳಿದರು.

ಪಂಚರತ್ನ ಜಾರಿಗೆ ತರದಿದ್ದರೆ ಪಕ್ಷ ವಿಸರ್ಜನೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದಿಂದ ಅಧಿಕಾರ ಹಿಡಿದ ಕೇವಲ ಒಂದು ಗಂಟೆಯೊಳಗೆ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೊಳಿಸದಿದ್ದರೆ ಜಾತ್ಯತೀತ ಜನತಾದಳವನ್ನು ವಿಸರ್ಜಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಇಲ್ಲ. ರೈತರನ ಬದುಕು ಅತಂತ್ರವಾಗಿದೆ. ಬೆಲೆ ಏರಿಕೆ, ಮಕ್ಕಳ ಶಿಕ್ಷಣ, ಅನಾರೋಗ್ಯ ಸಮಸ್ಯೆ, ವಸತಿ ಸೇರಿದಂತೆ ಹಲವಾರು ಸವಾಲುಗಳು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ರೈತ ಎಂದಿಗೂ ಸಾಲಗಾರರಾಗದ ರೀತಿಯಲ್ಲಿ ಕಾರ್ಯಕ್ರಮ ರೂಪಿಸುವುದೇ ನನ್ನ ಗುರಿಯಾಗಿದೆ ಎಂದು ಸ್ಪಷ್ಟಪಡಿಸಿದರು.

ಸಮಾರಂಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಜಾ.ದಳ ಅಧ್ಯಕ್ಷ ಡಿ.ರಮೇಶ್, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನಗರಸಭೆ ಅಧ್ಯಕ್ಷ ಎಚ್.ಎಸ್. ಮಂಜು, ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ನಗರಸಭೆ ಉಪಾಧ್ಯಕ್ಷೆ ಇಷ್ರತ್ ಫಾತಿಮಾ, ಜಿಪಂ ಮಾಜಿ ಸದಸ್ಯ ಎಚ್.ಎನ್. ಯೋಗೇಶ್, ಮುಖಂಡ ಕೆ.ಎಸ್. ವಿಜಯ್ ಆನಂದ್, ನಗರಸಭೆ ಸದಸ್ಯೆ ಮೀನಾಕ್ಷಿ ಪುಟ್ಟಸ್ವಾಮಿ, ಮಾಜಿ ಅಧ್ಯಕ್ಷೆ ಅಂಬುಜಮ್ಮ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!