ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯವಿದ್ದರೆ ನೆಮ್ಮದಿಯ ಜೀವನ ನಡೆಸಬಹುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.
ಮದ್ದೂರು ಪಟ್ಟಣದ ಕೆ.ಗುರುಶಾಂತಪ್ಪ ಆಸ್ಪತ್ರೆಯ ಆವರಣದಲ್ಲಿ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಆಯುಷ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಆಯೋಜಿಸಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ಮನುಷ್ಯ ಹಲವು ಒತ್ತಡಗಳ ಮಧ್ಯೆ ಜೀವನ ನಡೆಸುತ್ತಿದ್ದಾನೆ. ಒತ್ತಡದಿಂದಲೇ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಆದ್ದರಿಂದ ಜನರು ಆರೋಗ್ಯದ ಬಗ್ಗೆ ಗಮನವಹಿಸಿ ಅದರ ರಕ್ಷಣೆಗೆ ಮುಂದಾಗಬೇಕೆಂದು ಸಲಹೆ ನೀಡಿದರು
ಆರೋಗ್ಯ ರಕ್ಷಣೆಗಾಗಿ ಸರ್ಕಾರ ಕೋಟ್ಯಾಂತರ ರೂಪಾಯಿ ಅನುದಾನ ನೀಡುತ್ತಿದೆ. ಜನರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಂಡು ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ತಿಳಿಸಿದರು.
ನನ್ನ ಅಧಿಕಾರವಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ಕೆಎಂ. ದೊಡ್ಡಿ, ಕೆಸ್ತೂರು, ಕಾಡು ಕೊತ್ತನಹಳ್ಳಿಯಲ್ಲಿ 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಟ್ಟಡಗಳು, ಸಿಬ್ಬಂದಿಗಳು, ವೈದ್ಯರು ಸೇರಿದಂತೆ ಸರ್ವರೀತಿಯಲ್ಲೂ ಆರೋಗ್ಯ ಕ್ಷೇತ್ರಕ್ಕೆ ಮಹತ್ವ ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಶ್ರವಣದೋಷ ಸಾಧನ ಹಾಗೂ ಆಯುಷ್ಮಾನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಯಿತು. ಆರೋಗ್ಯ ಮೇಳಕ್ಕೆ ತಾಲ್ಲೂಕಿನ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಧನಂಜಯ, ಪುರಸಭಾ ಅಧ್ಯಕ್ಷ ಸುರೇಶ್ ಕುಮಾರ್, ಉಪಾಧ್ಯಕ್ಷೆ ಸುಮಿತ್ರ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ಮಹೇಶ್, ಪಂಚಾಯಿತಿ ಅಧಿಕಾರಿ ಪ್ರಭು ಸ್ವಾಮಿ, ತಹಸೀಲ್ದಾರ್ ನರಸಿಂಹಮೂರ್ತಿ, ತಾ.ಪಂ. ಇಒ ಸಂದೀಪ್, ಬಿಇಒ ಮಹದೇವು, ಡಾ.ಆಶಾಲತಾ ಮತ್ತಿತರರು ಉಪಸ್ಥಿತರಿದ್ದರು.