ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ (ಸೈಕ್ಲೋನ್) ದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ, ಹವಾಮಾನ ಇಲಾಖೆ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ. ಜನವರಿ 5, 6 ರಂದು ಭಾರೀ ಮಳೆಯಾಗುವ ಸಂಭವ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಜನವರಿ 5ರಂದು ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರಿನಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.
ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಉಷ್ಣಾಂಶ ಕುಸಿತವಾಗಿ ಶೀತದ ವಾತಾವರಣ ಇರಲಿದೆ. ಹಾಸನ ಸೇರಿದಂತೆ ರಾಜ್ಯದ ಹಲವು ಕಡೆ ಗುರುವಾರ ಮಳೆಯಾಗಿದೆ.
ವಿಜಯಪುರದಲ್ಲಿ 13.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಕೆಲವು ಕಡೆಗಳಲ್ಲಿ ಶುಕ್ರವಾರ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮೋಡ ಕವಿದ ವಾತಾವರಣವಿರುವುದರಿಂದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದ್ದು, ಕನಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಗಾಳಿ ವೇಗ ತೀವ್ರವಾಗಿರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕೃಪೆ: ಈದಿನ.ಕಾಂ




