Thursday, November 19, 2026

ಪ್ರಾಯೋಗಿಕ ಆವೃತ್ತಿ

ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಿ: ಎಂ.ಶ್ರೀನಿವಾಸ್

ಅಭಿವೃದ್ಧಿ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡು,ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಶಾಸಕ ಎಂ.ಶ್ರೀನಿವಾಸ್ ಸೂಚಿಸಿದರು.

ಮಂಡ್ಯ ತಾಲ್ಲೂಕಿನ ಮುದ್ದನಘಟ್ಟ ಗ್ರಾಮದಲ್ಲಿ ಪಂಚಾಯತ್ ರಾಜ್‌ ಇಂಜಿನಿಯರಿಂಗ್‌ ಉಪವಿಭಾಗದ ವತಿಯಿಂದ 10 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜನರ ಮನವಿಯಂತೆ ಬಸರಾಳು ಹೋಬಳಿ ವ್ಯಾಪ್ತಿಯ ಮುದ್ದನಘಟ್ಟ, ನರಗಲು, ಕಂಬದಹಳ್ಳಿ, ಬಾಳೇನಹಳ್ಳಿ, ಮಾಯಣ್ಣನಕೊಪ್ಪಲು, ಹೊಡಘಟ್ಟ ಗ್ರಾಮಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು , ಬಿದರಕಟ್ಟೆ ಗ್ರಾಮದಲ್ಲಿ 10 ಲಕ್ಷ ರೂ.ವೆಚ್ಚದ ಶಾಲಾ ಕಟ್ಟಡ ನಿರ್ಮಾಣ, ಮತ್ತು ಸಮುದಾಯ ಭವನದ ಅಡುಗೆ ಮನೆ ದುರಸ್ತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಮಹಾಲಿಂಗೇಗೌಡ ಮುದ್ದನಘಟ್ಟ ರವರು ಶಾಸಕರನ್ನು ಸನ್ಮಾನಿಸಿ ಮಾತನಾಡಿ, ಇಂದು ರಸ್ತೆ ಅಭಿವೃದ್ಧಿಗೆ ಶಾಸಕ ಎಂ.ಶ್ರೀನಿವಾಸ್ ಅವರು ಚಾಲನೆ ನೀಡಿರುವುದು ಸಂತಸ ತಂದಿದೆ. ಶಾಸಕರು ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿರುವುದು ಸಂತಸದ ಸಂಗತಿ. ಮುದ್ದನಘಟ್ಟ ಗ್ರಾಮದ ಪುರಾತನ ಕಾಲದ ಶಿಥಿಲಗೊಂಡಿರುವ ಶ್ರೀ ಆಂಜನೇಯ ದೇವಾಲಯ ಹಾಗೂ ಅರಳಿ ಕಟ್ಟೆ ಅಭಿವೃದ್ದಿಗೆ ಶಾಸಕರ ಅನುದಾನ ಒದಗಿಸಿಕೊಡುವಂತೆ ಗ್ರಾಮಸ್ಥರ ಪರವಾಗಿ ಮನವಿ ಮಾಡಿದರು.

ಇದಕ್ಕೆ ಶಾಸಕ ಎಂ.ಶ್ರೀನಿವಾಸ್ ಅವರು ಆಂಜನೇಯ ದೇವಾಲಯದ ಜೀರ್ಣೋದ್ಧಾರಕ್ಕೆ ಮತ್ತು ಅರಳಿ ಕಟ್ಟೆ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ, ಜಿ. ಪಂ. ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್, ಕಾರ್ಯಪಾಲ ಅಭಿಯಂತರ ಶಂಕರ್, ಗುತ್ತಿಗೆದಾರ ಬಿ.ಎಸ್‌.ರಾಜೇಶ್, ಮುಖಂಡರಾದ ಆನಂದ್ , ಗುರು ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ